
ಮೈಸೂರು: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣಾ ಅಖಾಡ ರಂಗೇರಿದ್ದು, ಈಗಾಗಲೇ ಬಿಜೆಪಿ ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ಮೈತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಚನ್ನಪಟ್ಟಣ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ಈ ನಡುವೆ ಕಾಂಗ್ರೆಸ್ ಸಂಡೂರು ಕ್ಷೇತ್ರಕ್ಕೆ ಅಭ್ಯರ್ಥಿ ಫೈನಲ್ ಮಾಡಿದೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂಡೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದರಾದ ಈ.ತುಕಾರಾಂ ಅವರ ಪತ್ನಿ ಅವರಿಗೆ ಟಿಕೆಟ್ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಸಂಸದ ಇ.ತುಕಾರಾಮ್ ಪತ್ನಿ ಅನ್ನಪೂರ್ಣ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಾಗುವುದು. ಉಳಿದ ಎರಡು ಕಡೆ ಇಂದು ಅಭ್ಯರ್ಥಿ ಫೈನಲ್ ಆಗಲಿದೆ ಎಂದರು.
ಚನ್ನಪಟ್ಟಣದಲ್ಲಿ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎನ್ನುವ ಚರ್ಚೆ ಆಗಿದೆ. ಡಿ.ಕೆ.ಸುರೇಶ್ ಅವರೂ ಕೂಡ ಪ್ರಭಲಆಕಾಂಕ್ಷಿಯಾಗಿದ್ದಾರೆ. ಒಂದೆರಡು ದಿನಗಳಲ್ಲಿ ಚನ್ನಪಟ್ಟಣ ಮತ್ತು ಶಿಗ್ಗಾಂವಿ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಎಂಬುದು ಸ್ಪಷ್ಟವಾಗಲಿದೆ ಎಂದು ಹೇಳಿದರು.