
ಶಿವಮೊಗ್ಗ: ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರದ ಬಿಜೆಪಿ ಅಭ್ಯರ್ಥಿಯಾಗಿರುವ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಚಾರಕ್ಕೆ ತೆರಳಿದ್ದ ವೇಳೆ ಪ್ರತಿಭಟನೆ ಬಿಸಿ ತಟ್ಟಿದೆ.
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ತರಲಘಟ್ಟ ತಾಂಡಾದಲ್ಲಿ ವಿಜಯೇಂದ್ರ ಭಾನುವಾರ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ವೇಳೆ ಪ್ರತಿಭಟನೆಯ ಸ್ವಾಗತ ಎದುರಾಗಿದೆ. ವಿಜಯೇಂದ್ರ ಪಕ್ಷದ ಕಾರ್ಯಕರ್ತರು, ಬೆಂಬಲಿಗರೊಂದಿಗೆ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ತಡೆದ ಗ್ರಾಮಸ್ಥರು ಒಳ ಮೀಸಲಾತಿಯ ವರ್ಗೀಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ನಿಲುವಿಗೆ ವಿರೋಧ ವ್ಯಕ್ತಪಡಿಸಿ ಧಿಕ್ಕಾರ ಕೂಗಿದ್ದಾರೆ.
ಮಹಿಳೆಯರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಅವರನ್ನು ಸಮಾಧಾನಪಡಿಸಲು ತಾಲೂಕು ಬಂಜಾರ ಸಮಾಜದ ಮುಖಂಡರು ವಿಫಲ ಯತ್ನ ನಡೆಸಿದ್ದಾರೆ. ಮುಖಂಡರನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡಿದ್ದು, ಇದರಿಂದ ಮುಜುಗರಕ್ಕೆ ಒಳಗಾದ ವಿಜಯೇಂದ್ರ ಅಲ್ಲಿಂದ ತೆರಳಿದ್ದಾರೆ.