ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ತಂಡದ ಚಟುವಟಿಕೆಗಳಿಂದ ಪಕ್ಷ ಸಂಘಟನೆಗೆ ಅಡ್ಡಿಯಾಗುತ್ತಿದೆ ಇದಕ್ಕೆ ಕಡಿವಾಣ ಹಾಕಬೇಕು ಎಂದು ಕೋರಿ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ದೂರು ನೀಡಿದ್ದಾರೆ.
ಬುಧವಾರ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಹೊಸ ವರ್ಷದ ಶುಭಾಶಯ ಕೋರಿದ ವಿಜಯೇಂದ್ರ ರಾಜ್ಯದ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ನಾನು ರಾಜ್ಯಾಧ್ಯಕ್ಷನಾದಾಗಿನಿಂದಲೂ ನಾಯಕತ್ವದ ವಿರುದ್ಧ, ಯಡಿಯೂರಪ್ಪನವರ ವಿರುದ್ಧ ಯತ್ನಾಳ್ ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ. ಅವರೊಂದಿಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇತರೆ ನಾಯಕರು ಕೈಜೋಡಿಸಿದ್ದಾರೆ. ಪ್ರತ್ಯೇಕ ವಕ್ಫ್ ಹೋರಾಟ ಮಾಡುತ್ತಿದ್ದಾರೆ. ಅವರಿಂದಾಗಿ ರಾಜ್ಯದಲ್ಲಿ ಪಕ್ಷ ಸಂಘಟನೆಗೆ ತೊಡಕಾಗಿದೆ. ಗೊಂದಲ ಉಂಟಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ ಅಮಿತ್ ಶಾ ಪರೀಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಇನ್ನು ಸಚಿವ ಪ್ರಿಯಾಂಕ್ ಖರ್ಗೆ ಸೇರಿ ರಾಜ್ಯದ ಸಚಿವರ ವಿರುದ್ಧದ ಆರೋಪಗಳು ಮತ್ತು ಪ್ರಕರಣಗಳ ಬಗ್ಗೆಯೂ ಕೇಂದ್ರ ಗೃಹ ಸಚಿವರಿಗೆ ವಿಜಯೇಂದ್ರ ಮಾಹಿತಿ ನೀಡಿದ್ದಾರೆ.
ಬೀದರ್ ಜಿಲ್ಲೆಯ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆ ವಿರುದ್ಧದ ಆರೋಪಗಳ ಬಗ್ಗೆ ವಿವರಣೆ ನೀಡಿದ್ದಾರೆ ಎಂದು ಹೇಳಲಾಗಿದೆ.