ಚಿತ್ರದುರ್ಗ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪರ್ಧಿಸುವುದು ಖಚಿತವಾಗಿದೆ. ಅವರು ವರುಣಾ, ಗುಬ್ಬಿ, ಇಲ್ಲವೇ ಹೊಸದುರ್ಗ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಚರ್ಚೆ ನಡೆದಿದೆ.
ಚಿತ್ರದುರ್ಗ ಜಿಲ್ಲೆ ಹೊಸದುರ್ಗದಲ್ಲಿ ಬಿಜೆಪಿ ಮುಖಂಡ, ಖನಿಜ ನಿಗಮದ ಅಧ್ಯಕ್ಷ ಎಸ್. ಲಿಂಗಮೂರ್ತಿ ಅವರ ಜನಸಂಪರ್ಕ ಕಚೇರಿ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ವರುಣಾ, ಹೊಸದುರ್ಗ, ಗುಬ್ಬಿ ಕ್ಷೇತ್ರದಿಂದ ನಾನು ಸ್ಪರ್ಧಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಜನ ನನ್ನನ್ನು ಅಪೇಕ್ಷೆ ಪಡುತ್ತಿದ್ದು, ಪಕ್ಷ ಸೂಚನೆ ನೀಡಿದ ಕ್ಷೇತ್ರದಲ್ಲಿ ನಾನು ಸ್ಪರ್ಧಿಸಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.
ಆದರೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಾಗಿ ಇನ್ನೂ ತೀರ್ಮಾನವಾಗಿಲ್ಲ. ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂಬುದನ್ನು ಪಕ್ಷ ತೀರ್ಮಾನಿಸುತ್ತದೆ. ಪಕ್ಷದಿಂದ ನೀಡುವ ಜವಾಬ್ದಾರಿಯನ್ನು ನಾನು ನಿರ್ವಹಿಸುತ್ತೇನೆ ಎಂದರು.
ಎಸ್. ಲಿಂಗಮೂರ್ತಿ ಹೊಸದುರ್ಗ ಕ್ಷೇತ್ರದಲ್ಲಿ ಜನಸೇವೆ ಮಾಡುತ್ತಿದ್ದಾರೆ. ಜನಸೇವೆಗೆ ಯಾವುದೇ ಸ್ಥಾನಮಾನ ಬೇಕಿಲ್ಲ ಎಂದ ಅವರು, ಜನರಿಗೆ ಹತ್ತಿರವಾಗಿ ಕೆಲಸ ಮಾಡಬೇಕು. ಮುಂದಿನ ಚುನಾವಣೆಯಲ್ಲಿ ಲಿಂಗಮೂರ್ತಿ ಅವರಿಗೆ ಅವಕಾಶ ಸಿಗುವ ಕುರಿತಂತೆ ಪಕ್ಷ ತೀರ್ಮಾನಿಸುತ್ತದೆ. ಶಾಸಕ ಗೂಳಿಹಟ್ಟಿ ಶೇಖರ್ ಕಾರ್ಯಕ್ರಮಕ್ಕೆ ಗೈರುಹಾಜರಾಗಿರುವುದ ಬಗ್ಗೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದ್ದಾರೆ.