ಹಲವು ಉಪ ಚುನಾವಣೆಗಳಲ್ಲಿ ಬಿಜೆಪಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಬಿ.ವೈ. ವಿಜಯೇಂದ್ರಗೆ ಮೊದಲ ಸಲ ಹಿನ್ನಡೆಯಾಗಿದೆ. ಬಿಜೆಪಿ ಗೆಲುವು ಕಷ್ಟವೆಂದೇ ಹೇಳಲಾಗಿದ್ದ ಕೆಆರ್ ಪೇಟೆಯಂತಹ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನಲ್ಲಿ ವಿಜಯೇಂದ್ರ ಪ್ರಮುಖ ಪಾತ್ರ ವಹಿಸಿದ್ದರು.
ಈಗ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಸೋಲುವುದು ಬಹುತೇಕ ಖಚಿತವಾಗಿದೆ. ಕ್ಷೇತ್ರದ ಚುನಾವಣೆ ಉಸ್ತುವಾರಿ ವಹಿಸಿಕೊಂಡಿದ್ದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಜನಾದೇಶಕ್ಕೆ ತಲೆಬಾಗುವುದಾಗಿ ಹೇಳಿದ್ದಾರೆ. ಚುನಾವಣೆಗಳಲ್ಲಿ ಸೋಲು-ಗೆಲುವುಗಳನ್ನು ಸಮಭಾವದಿಂದ ಸ್ವೀಕರಿಸೋಣ. ಮಸ್ಕಿ ಕಾರ್ಯಕರ್ತರು ಎದೆಗುಂದುವುದು ಬೇಡ. ನಿಮ್ಮ ಪರಿಶ್ರಮ, ಹೋರಾಟ ವ್ಯರ್ಥವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಕಾರ್ಯಕರ್ತನಾಗಿ ಸದಾ ನಿಮ್ಮೊಂದಿಗೆ ಇರುತ್ತೇನೆ. ಬಿಜೆಪಿ ಬೆಂಬಲಿಸಿದ ಮತದಾರ ಬಂಧುಗಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.