ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಜೂನ್ 17 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ.
ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯನ್ನು ತೀವ್ರವಾಗಿ ಖಂಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡಲೇ ಬೆಲೆ ಇಳಿಕೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವಿಜಯೇಂದ್ರ, ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಮೇಲೆ ಗೆಲ್ಲುವ ಭ್ರಮೆಯಲ್ಲಿದ್ದರು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷಿತ ಫಲಿತಾಂಶ ಬರಲಿಲ್ಲ. ಅದರ ಸೇಡನ್ನು ರಾಜ್ಯದ ಜನರ ಮೇಲೆ ತೋರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ವೇತನ ನೀಡಲು ಕೂಡ ಆಗದಂತಹ ಸ್ಥಿತಿಗೆ ಸರ್ಕಾರ ತಲುಪಿದೆ. ರಾಜ್ಯದ ಜನರ ಮೇಲೆ ಹೊರೆ ಹಾಕಿರುವುದು ಅಕ್ಷಮ್ಯ ಅಪರಾಧವಾಗಿದೆ. ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.