ರಾಮನಗರ: ಚೆನ್ನಪಟ್ಟನ ಉಪಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಸಿದ್ಧತೆ ನಡೆಸಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದ್ದು ಕುತೂಹಲಕ್ಕೆ ಕಾರಣವಾಗಿದೆ.
ಬಿಜೆಪಿ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಸಿ.ಪಿ.ಯೋಗೇಶ್ವರ್ ಬೆಂಬಲಿಗರು ಆಯೋಜಿಸಿದ್ದ ಸಮಾನ ಮನಸ್ಕರರ ಸಮಾವೇಶ ಕೊನೇ ಕ್ಷಣದಲ್ಲಿ ರದ್ದಾಗಿದೆ. ರಾಮನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ‘ನಮ್ಮ ಶಾಸಕ ನಮ್ಮ ಹಕ್ಕು’ ಹೆಸರಲ್ಲಿ ಸಮಾನ ಮನಸ್ಕರರ ಹಾಗೂ ಯೋಗೇಶ್ವರ್ ಅಭಿಮಾನಿ ಬಳಗದಿಂದ ಸಮಾವೇಶ ಆಯೋಜಿಸಲಾಗಿತ್ತು.
ಒಂದು ವೇಳೆ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ನಿಟ್ಟಿನಲ್ಲಿ ಅಭಿಪ್ರಾಯ ಸಂಗ್ರಹಿಸಲು ಸಮಾವೇಶ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಇಂದು ಬಿಜೆಪಿ ಹೈಕಮಾಂಡ್ ದೆಹಲಿಗೆ ಬರುವಂತೆ ಸಿ.ಪಿ.ಯೋಗೇಶ್ವರ್ ಗೆ ಬುಲಾವ್ ನೀಡಿದೆ. ಈ ಹಿನ್ನೆಲೆಯಲ್ಲಿ ಸಮಾವೇಶ ಕೊನೇ ಕ್ಷಣದಲ್ಲಿ ರದ್ದಾಗಿದೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಸೋಮವಾರ ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಚೆನ್ನಪಟ್ಟಣ ಉಪಚುನಾವಣೆ ಮೈತ್ರಿ ಅಭ್ಯರ್ಥಿ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಯೋಗೇಶ್ವರ್ ಅವರನ್ನು ದೆಹಲಿಗೆ ಕರೆದಿದ್ದು, ಟಿಕೆಟ್ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.