ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ಎನ್ ಡಿಎ ಟಿಕೆಟ್ ಸಿಗದ ಬೆನ್ನಲ್ಲೇ ಬಿಜೆಪಿ-ಜೆಡಿಎಸ್ ಮೈತ್ರಿಗೆ ಸೆಡ್ಡು ಹೊಡೆದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಮತ್ತೆ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಬಾವುಟ ನೀಡುವ ಮೂಲಕ ಸಿ.ಪಿ.ಯೋಗೇಶ್ವರ್ ಅವರನ್ನು ಅಧಿಕೃತವಾಗಿ ಕಾಂಗ್ರೆಸ್ ಗೆ ಬರಮಾಡಿಕೊಂಡರು. ಈ ಮೂಲಕ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಉಪಚುನಾವನಾ ಅಖಾಡದಲ್ಲಿ ಚನ್ನಪಟ್ಟಣ ರಾಜಕೀಯ ಚದುರಂಗದಾಟ ತೀವ್ರ ಕುತೂಹಲ ಮೂಡಿಸಿದೆ.
ಕೆಪಿಸಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಇಂದು ಬೆಳಿಗ್ಗೆ ಸಿ.ಪಿ.ಯೋಗೇಶ್ವರ್ ನನ್ನನ್ನು ಭೇಟಿಯಾಗಿದ್ದು, ಈ ವೇಳೆ ನನ್ನ ರಾಜಕಾರಣ ಕಾಂಗ್ರೆಸ್ ಪಕ್ಷದಿಂದ ಶುರುವಾಗಿದ್ದು, ಕಾಂಗ್ರೆಸ್ ನಲ್ಲಿಯೇ ಮುಂದುವರೆಸಬೇಕು ಎಂಬ ಆಸೆಯಿದೆ ಎಂದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಹಿರಿಯ ನಾಯಕರ ಅನುಮತಿ ಪಡೆದು ಯಾವುದೇ ಷರತ್ತುಗಳಿಲ್ಲದೇ ಪಕ್ಷದ ಸಿದ್ಧಾಂತ ಒಪ್ಪಿ ಸಿ.ಪಿ.ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿಸಿದರು.