ಹುಬ್ಬಳ್ಳಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಈಗಾಗಲೇ ನಾನು ಈ ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶ ನೀಡಿದ್ದೇನೆ. ತನಿಖೆಗೆ ಆದೇಶಿಸಿರುವುದರಿಂದ ಈ ಬಗ್ಗೆ ಹೆಚ್ಚು ಮಾತನಾಡಲ್ಲ ಎಂದರು.
ಸಿ.ಟಿ.ರವಿ ತಾನು ಆ ಪದ ಬಳಸಿಲ್ಲ ಎನ್ನುತ್ತಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ದೂರು ನೀಡಿದ್ದಾರೆ. ಪರಿಷತ್ ಸಭಾಪತಿಗಳು ಅವರ ಕೆಲಸ ಮಾಡಿದ್ದಾರೆ. ಈ ಪ್ರಕರಣದ ಬಗ್ಗೆ ಪೊಲಿಸರು ತನಿಖೆ ಮಾಡಬೇಕು. ತನಿಖೆ ನಡೆಯುವಾಗ ಹೆಚ್ಚು ಮಾತನಾಡೋದು ಸರಿಯಲ್ಲ. ತನಿಖೆಯಾಗಲಿ ಎಂದು ಹೇಳಿದರು.