ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸೇರಿದ ಸಿದ್ದಾರ್ಥ ವಿಹಾರ ಟ್ರಸ್ಟ್ ಗೆ ಮತ್ತು ಸಚಿವ ಎಂ.ಬಿ. ಪಾಟೀಲ್ ಅವರ ಜೊತೆ ಸಂಬಂಧ ಹೊಂದಿರುವ ವ್ಯಕ್ತಿಗಳ ಸಂಸ್ಥೆಗಳಿಗೆ ನಿಯಮಬಾಹಿರವಾಗಿ ಕೆಐಎಡಿಬಿ ಯ ಸಿಎ ಸೈಟ್ ಗಳನ್ನು ಹಂಚಿಕೆ ಮಾಡಲಾಗಿದೆ ಎಂಬ ದೂರಿನ ಅನ್ವಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಸರ್ಕಾರದ ಸ್ಪಷ್ಟನೆ ಕೋರಿ ಪತ್ರ ಬರೆದಿದ್ದಾರೆ.
ಕೆಐಎಡಿಬಿಯ ಸಿಎ ನಿವೇಶನ ಹಂಚಿಕೆಯಲ್ಲಿ ನಿಯಮ ಉಲ್ಲಂಘಿಸಿದ್ದು, 43 ನಿವೇಶನ ಹಂಚಿಕೆ ಮಾಡುವಲ್ಲಿ ಸ್ವಜನಪಕ್ಷಪಾತ ಅನುಸರಿಸಲಾಗಿದೆ. ಹೀಗಾಗಿ ಸಚಿವ ಎಂ.ಬಿ. ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ರಾಜ್ಯಪಾಲರಿಗೆ ದೂರು ನೀಡಿದ್ದರು.
ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಪ್ರಭಾವ ಬಳಸಿ ಸಹೋದರ ರಾಹುಲ್ ಖರ್ಗೆ ಅವರ ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ಕೆಐಎಡಿಬಿ ಯಿಂದ 5 ಎಕರೆ ನಿವೇಶನ ಪಡೆದಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ರಾಜ್ಯಪಾಲರಿಗೆ ದೂರು ನೀಡಿದ್ದರು.
ಈ ವಿಚಾರಗಳಿಗೆ ಸಂಬಂಧಿಸಿದಂತೆ ವಿವರಣೆ ಕೋರಿ ರಾಜ್ಯಪಾಲರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದಾರೆ. ಇದರೊಂದಿಗೆ ಸಿಎ ಸೈಟ್ ವಿಚಾರವಾಗಿ ಸರ್ಕಾರದ ಜತೆ ರಾಜ್ಯಪಾಲರ ಸಂಘರ್ಷ ಶುರುವಾಗಿದ್ದು, ಸಚಿವರಿಗೆ ಸಂಕಷ್ಟ ಎದುರಾಗಿದೆ ಎಂದು ಹೇಳಲಾಗಿದೆ.