ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯ ಮೋತಿಲಾಲ್ ನೆಹರು ಮಾರ್ಗ್ ನಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನಿವಾಸಕ್ಕೆ ಆಗಮಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪಕ್ಷದ ವರಿಷ್ಠರ ಒಪ್ಪಿಗೆ ಪಡೆಯಲು ದೆಹಲಿಗೆ ಆಗಮಿಸಿದ್ದ ಸಿಎಂ ಬೊಮ್ಮಾಯಿ ಮಧ್ಯಾಹ್ನ ಕೇಂದ್ರ ನಾಯಕರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದರು. ರಾತ್ರಿ ಜೆ.ಪಿ. ನಡ್ಡಾ ಭೇಟಿಗೆ ಸಮಯ ನಿಗದಿಯಾಗಿದ್ದ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ತೆರಳಿ ಸಮಾಲೋಚನೆ ನಡೆಸಲಿದ್ದಾರೆ.
ಹೈಕಮಾಂಡ್ ನೀಡಲಿರುವ ಸಚಿವ ಪಟ್ಟಿ ಹಾಗೂ ಸಿಎಂ ಸಿದ್ಧಪಡಿಸಿಕೊಂಡ ಪಟ್ಟಿಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಿ ನೂತನ ಸಚಿವರ ಅಂತಿಮ ಪಟ್ಟಿ ಸಿದ್ಧಪಡಿಸಲಾಗುವುದು. ವರಿಷ್ಠರ ಒಪ್ಪಿಗೆ ಪಡೆದು ಬೊಮ್ಮಾಯಿ ಬೆಂಗಳೂರಿಗೆ ಆಗಮಿಸಲಿದ್ದು, ನಾಳೆ ಇಲ್ಲವೇ ಬುಧವಾರ ಸಚಿವ ಸಂಪುಟ ರಚನೆಯಾಗಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.