ಬೆಂಗಳೂರು: ಮೇಕೆದಾಟು ಯೋಜನೆ ಸೇರಿದಂತೆ ರಾಜ್ಯದ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ, ಸಹಕಾರ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಅವರೊಂದಿಗೆ ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆ ಇದೆ.
ಸಂಪುಟ ಪುನಾರಚನೆ ವಿಷಯ ಸದ್ಯಕ್ಕೆ ಇಲ್ಲ ಎಂದು ಹೇಳಲಾಗಿದ್ದರೂ, ದೆಹಲಿ ಭೇಟಿಯ ಸಂದರ್ಭದಲ್ಲಿ ಸಂಪುಟ ಪುನಾರಚನೆ ಕುರಿತಂತೆ ವರಿಷ್ಠರೊಂದಿಗೆ ಸಮಾಲೋಚನೆ ನಡೆಸುವ ಸಾಧ್ಯತೆ ಇದೆ.
ಜುಲೈ 26 ಕ್ಕೆ ಯಡಿಯೂರಪ್ಪ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಲಿದ್ದು, ನಂತರ ಸಚಿವ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಇಲ್ಲವೇ ಅಷ್ಟರೊಳಗೆ ಸಚಿವ ಸಂಪುಟ ಪುನಾರಚನೆ ಮಾಡಬಹುದು. ಕೆಲವರನ್ನು ಸಂಪುಟದಿಂದ ಕೈಬಿಟ್ಟು, ಮುನಿರತ್ನ ಸೇರಿದಂತೆ ಕೆಲವರಿಗೆ ಅವಕಾಶ ನೀಡಬಹುದು ಎಂದು ಹೇಳಲಾಗಿದೆ.