ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆರ್ಥಿಕ ಸಲಹೆಗಾರರಾಗಿ ನೇಮಕವಾದ ಬಸವರಾಜ ರಾಯರೆಡ್ಡಿ, ಸಲಹೆಗಾರ ಬಿ.ಆರ್. ಪಾಟೀಲ್, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಅವರ ಹುದ್ದೆಗಳಿಗೆ ರಕ್ಷಣೆ ನೀಡಲು ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಹುದ್ದೆಗಳಿಗೆ ರಕ್ಷಣೆಗೆ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನಿಸಲಾಗಿದೆ. ಕರ್ನಾಟಕ ವಿಧಾನ ಮಂಡಲ(ಅನರ್ಹತ ನಿವಾರಣೆ) ತಿದ್ದುಪಡಿ ವಿಧೇಯಕವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ.
ಇದರಡಿ ವಿಧಾನಸಭೆ ಅಥವಾ ವಿಧಾನಪರಿಷತ್ ಸದಸ್ಯರಾಗಿದ್ದಾರೆ ಎನ್ನುವ ಕಾರಣಕ್ಕೆ ಮುಖ್ಯಮಂತ್ರಿಗಳಿಗೆ ಯಾವುದೇ ವ್ಯಕ್ತಿ ಆರ್ಥಿಕ ಸಲಹೆಗಾರರು, ಯಾವುದೇ ಆಯೋಗದ ಅಧ್ಯಕ್ಷರು ಅಥವಾ ಸದಸ್ಯರಾಗಿ ನೇಮಕಗೊಂಡರೆ ಅನರ್ಹರಾಗುವುದನ್ನು ತಪ್ಪಿಸಲು ಈ ತಿದ್ದುಪಡಿ ತರಲಾಗಿದೆ ಎಂದು ಹೇಳಲಾಗಿದೆ.