ಬೆಂಗಳೂರು: ಮುಡಾ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್, ಅರ್ಜಿ ಹೈಕೋರ್ಟ್ ನಲ್ಲಿ ತಿರಸ್ಕೃತಗೊಂಡಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ ಎಂದು ಹೇಳಲಾಗಿತ್ತು.
ಸಿಎಂ ಬುಧವಾರ ಶಾಸಕಾಂಗ ಪಕ್ಷದ ಸಭೆ ನಡೆಸಿ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ ಶಾಸಕಾಂಗ ಸಭೆ ನಡೆಸುವ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಪೂರ್ವ ನಿಗದಿಯಂತೆ ಸೆ. 26ರಂದು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ.
ಹೈಕೋರ್ಟ್ ತೀರ್ಪಿನ ನಂತರ ನಡೆಯಲಿರುವ ಮೊದಲ ಸಚಿವ ಸಂಪುಟ ಸಭೆ ಇದಾಗಿದ್ದು, ಸಭೆಯ ಬಗ್ಗೆ ಕುತೂಹಲ ಹೆಚ್ಚಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್, ಸಚಿವರು, ಶಾಸಕರು, ಮುಖಂಡರು ಬೆಂಬಲ ನೀಡಿದ್ದಾರೆ. ನಾಳಿನ ಸಂಪುಟ ಸಭೆಯಲ್ಲಿ ಹೈಕೋರ್ಟ್ ತೀರ್ಪಿನ ಬಗ್ಗೆ ಚರ್ಚೆ ನಡೆಸಿ ಮುಂದಿನ ನಡೆ ಬಗ್ಗೆ ತೀರ್ಮಾನಿಸಲಾಗುವುದು ಎನ್ನಲಾಗಿದೆ.