ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ.
ಪ್ರಗತಿಪಥ ಯೋಜನೆಯಡಿ 7,110 ಕಿ.ಮೀಗಳ ಗ್ರಾಮೀಣ ರಸ್ತೆ ಅಭಿವೃದ್ಧಿಯನ್ನು 5,190 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ರಾಜ್ಯದ ಎಲ್ಲಾ ಸರ್ಕಾರಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರೂ. 29 ಕೋಟಿ ಅಂದಾಜು ಮೊತ್ತದಲ್ಲಿ ಉಚಿತ ವಿದ್ಯುತ್ ಹಾಗೂ ನೀರಿನ ಸೌಲಭ್ಯ ಒದಗಿಸುವ ಕಾರ್ಯಕ್ರಮಕ್ಕೆ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಪ್ರಧಾನ ಮಂತ್ರಿ ಉಚ್ಛತರ್ ಶಿಕ್ಷಾ ಅಭಿಯಾನ ಯೋಜನೆಯನ್ನು ರಾಜ್ಯದ 6 ವಿಶ್ವ ವಿದ್ಯಾಲಯಗಳಲ್ಲಿ 279 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಮೈಸೂರಿನ ಕೆಆರ್ ಆಸ್ಪತ್ರೆಯ ಆವರಣದಲ್ಲಿ ನೂತನ ಹೊರರೋಗಿ ವಿಭಾಗದ ಕಟ್ಟಡ ಕಾಮಗಾರಿಯನ್ನು 75 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಅಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಕುಸನೂರ ವಸತಿ ಯೋಜನೆಯ ಪರಿಷ್ಕೃತ ಮೊತ್ತ 122 ಕೋಟಿ ರೂ. ಅಂದಾಜು ಮೊತ್ತಕ್ಕೆ ಅನುಮೋದನೆ ನೀಡಲಾಗಿದೆ. ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಕಣಬರಗಿ ವಸತಿ ಯೋಜನೆಯ ಪರಿಷ್ಕೃತ ಮೊತ್ತ 137 ಕೋಟಿ ರೂ.ಳ ಅಂದಾಜಿಗೆ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.
ಹಾಸನ ಜಿಲ್ಲೆಯ ಮೊಸಳೆಹೊಸಹಳ್ಳಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಕಟ್ಟಡ ನಿರ್ಮಾಣ ಕಾಮಗಾರಿಯ 59.57 ಕೋಟಿ ರೂ. ಪರಿಷ್ಕೃತ ಅಂದಾಜು ಮೊತ್ತಕ್ಕೆ ಒಪ್ಪಿಗೆ ನೀಡಲಾಗಿದೆ.