ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ರಾಜ್ಯದ ವಿವಿಧ ಜೈಲುಗಳಲ್ಲಿರುವ 114 ಕೈದಿಗಳ ಬಿಡುಗಡೆ ಮಾಡಲು ಒಪ್ಪಿಗೆ ನೀಡಲಾಗಿದೆ.
ಸನ್ನಡತೆ ಆಧಾರದಲ್ಲಿ 114 ಕೈದಿಗಳ ಬಿಡುಗಡೆಗೆ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಅಕ್ರಮ ಗಣಿಗಾರಿಕೆ ತನಿಖೆಯ ಬಗ್ಗೆ ಎಸ್ಐಟಿ ಅವಧಿ ಒಂದು ವರ್ಷ ವಿಸ್ತರಣೆ ಮಾಡಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ರಾಯಚೂರು ವಿಮಾನ ನಿಲ್ದಾಣದ ಅಭಿವೃದ್ಧಿಗೆ 185.57 ಕೋಟಿ ರೂಪಾಯಿ ವೆಚ್ಚದ ಯೋಜನೆಗೆ ಸಂಪುಟ ಒಪ್ಪಿಗೆ ನೀಡಿದೆ. ರೈಟ್ಸ್ ಇಂಡಿಯಾ ಕಂಪನಿಗೆ ಗುತ್ತಿಗೆ ನೀಡಲು ಒಪ್ಪಿಗೆ ನೀಡಲಾಗಿದೆ.
ಉಡುಪಿಯ ಹಾಜಿ ಅಬ್ದುಲ್ಲಾ ಆಸ್ಪತ್ರೆಯನ್ನು ಸರ್ಕಾರದ ಸುಪರ್ದಿಗೆ ಪಡೆದುಕೊಳ್ಳಲಾಗುವುದು.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರಿನಲ್ಲಿ ಸೇತುವೆ ನಿರ್ಮಾಣ ಮಾಡಲಾಗುತ್ತದೆ. 68.88 ಕೋಟಿ ರೂ. ವೆಚ್ಚದಲ್ಲಿ ನಾಲ್ಕು ಸೇತುವೆಗಳನ್ನು ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ.
ರಾಮನಗರ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದ್ದು, 93.33 ಕೋಟಿ ರೂಪಾಯಿ ವೆಚ್ಚದ ಯೋಜನೆಗೆ ಸಂಪುಟ ಸಭೆ ಸಮ್ಮತಿಸಿದೆ.