ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ. ವಿಧಾನಸಭೆ ವಿಪಕ್ಷ ನಾಯಕರಾಗಿದ್ದ ಅವರು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು.
ಈಡಿಗರ ಕೋಟಾದಿಂದ ಅವರು ಸಚಿವರಾಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಈಡಿಗರ ಕೋಟಾದಿಂದ ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ರಾಜ್ಯಸಭೆ ಸದಸ್ಯರಾಗಿ, ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ ಉಸ್ತುವಾರಿಯಾಗಿ ಹಾಗೂ ರಾಜ್ಯ ವಿಧಾನ ಪರಿಷತ್ ಸದಸ್ಯರಾಗಿ, ವಿಪಕ್ಷ ನಾಯಕರಾಗಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದ ಹರಿಪ್ರಸಾದ್ ಸಚಿವ ಸ್ಥಾನಕಾಂಕ್ಷಿಯಾಗಿದ್ದರು.
ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಹಿರಿಯ ನಾಯಕರಿಗೆ ಸಚಿವ ಸ್ಥಾನ ಮಿಸ್ ಆಗಿದೆ. ಆರ್.ವಿ. ದೇಶಪಾಂಡೆ, ಟಿ.ಬಿ. ಜಯಚಂದ್ರ, ಬಸವರಾಜ ರಾಯರೆಡ್ಡಿ ಮೊದಲಾದ ನಾಯಕರಿಗೆ ಸಚಿವ ಸ್ಥಾನ ಕೈತಪ್ಪಿದ್ದು, ಬಿ.ಕೆ. ಹರಿಪ್ರಸಾದ್ ಕೂಡ ಸಚಿವ ಸ್ಥಾನ ವಂಚಿತರಾಗಿದ್ದಾರೆ.
ಸಚಿವ ಸ್ಥಾನ ಸಿಗಲ್ಲ ಎನ್ನುವುದು ಖಚಿತವಾಗುತ್ತಿದ್ದಂತೆ ಹರಿಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಸಮಾಧಾನಗೊಂಡಿರುವ ಹರಿಪ್ರಸಾದ್ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಈ ಕುರಿತಾಗಿ ಆಪ್ತರೊಂದಿಗೆ ಚರ್ಚೆ ಕೂಡ ನಡೆಸಿದ್ದಾರೆ ಎಂದು ಹೇಳಲಾಗಿದೆ.