ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿಯೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆಗೆ ಪ್ರಕ್ರಿಯೆ ಪ್ರಾರಂಭವಾಗಿದೆ. ಸಚಿವ ಸಂಪುಟದಿಂದ ಕೆಲವರನ್ನು ಕೈಬಿಟ್ಟು ಹೊಸಬರಿಗೆ ಆದ್ಯತೆ ನೀಡಲು ಬಿಜೆಪಿ ವರಿಷ್ಠರು ನಿರ್ಧರಿಸಿದ್ದಾರೆ. ರಾಜ್ಯದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿರುವ ಬಿಜೆಪಿ ವರಿಷ್ಠರು ಸಚಿವ ಸಂಪುಟದಿಂದ ಹಿರಿಯರನ್ನು ಕೈಬಿಟ್ಟು ಹೊಸಬರಿಗೆ ಆದ್ಯತೆ ನೀಡಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಮುಂದಿನ ವಿಧಾನಸಭೆ ಚುನಾವಣೆಯನ್ನು ಗೆಲ್ಲಲು ಈಗಿನಿಂದಲೇ ಕಾರ್ಯತಂತ್ರ ರೂಪಿಸಲು ಮುಂದಾಗಿರುವ ಬಿಜೆಪಿ ವರಿಷ್ಠರು, ಪಂಚರಾಜ್ಯ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿದ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ. ಸಂಪುಟ ವಿಸ್ತರಣೆ ಮಾಡುವ ಬದಲು ಪುನಾರಚನೆ ಮಾಡುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಗುಜರಾತ್ ಅಥವಾ ಉತ್ತರಾಖಂಡ್ ಪ್ರಯೋಗದ ಬಗ್ಗೆ ಚರ್ಚೆ ನಡೆಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಮತ ತಂದು ಅಧಿಕಾರಕ್ಕೇರುವ ನಿಟ್ಟಿನಲ್ಲಿ ಹೊಸಮುಖಗಳಿಗೆ ಸಚಿವ ಸ್ಥಾನ ನೀಡಲು ಚಿಂತನೆ ನಡೆದಿದೆ. ಹಿರಿಯರು ಮತ್ತು ಎರಡು ಬಾರಿ ಸಚಿವರಾದವರಿಗೆ ಕೊಕ್ ನೀಡಲಾಗುವುದು ಎಂದು ಹೇಳಲಾಗಿದೆ.
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಒತ್ತಡ ಇದ್ದರೂ ಕೂಡ 5 ರಾಜ್ಯಗಳ ವಿಧಾನಸಭಾ ಚುನಾವಣೆಯ ಪ್ರಕ್ರಿಯೆಯನ್ನು ಮುಂದೂಡಲಾಗಿತ್ತು. ಈಗ ಚುನಾವಣೆಗಳು ಮುಕ್ತಾಯವಾಗಿರುವುದರಿಂದ ರಾಜ್ಯದಲ್ಲಿ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ.