ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಚಾರ ಮಾದರಿಯಲ್ಲೇ ಏಪ್ರಿಲ್ 6ರಂದು ಕೋಲಾರದ ಮುಳಬಾಗಿಲು ತಾಲೂಕು ಕುರುಡುಮಲೆಯಲ್ಲಿ ಕಾಂಗ್ರೆಸ್ ನಿಂದ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಲಾಗುವುದು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ. ಶನಿವಾರ ಬೆಳಗ್ಗೆ 11 ಗಂಟೆಗೆ ಸಿಎಂ ಮತ್ತು ಡಿಸಿಎಂ ಹೆಚ್ಐಎಲ್ ನಿಂದ ಹೆಲಿಕಾಪ್ಟರ್ ಮೂಲಕ ಕೋಲಾರಕ್ಕೆ ತೆರಳಲಿದ್ದಾರೆ. ಮುಳಬಾಗಿಲು ತಾಲೂಕು ಕುರುಡುಮಲೆ ವಿನಾಯಕ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಮಧ್ಯಾಹ್ನ 12.30ಕ್ಕೆ ಮುಳಬಾಗಿಲು ಪಟ್ಟಣದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ ಮತ್ತು ರೋಡ್ ಶೋ ನಡೆಸುವ ಮೂಲಕ ಅಬ್ಬರದ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಮೊದಲ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ರಾಜ್ಯದ 14 ಕ್ಷೇತ್ರಗಳಲ್ಲಿಯೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಉಭಯ ನಾಯಕರು ಪ್ರತ್ಯೇಕವಾಗಿ ಬಿರುಸಿನ ಪ್ರಚಾರ ನಡೆಸಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ ಒಟ್ಟಿಗೆ ಪ್ರಚಾರ ಕೈಗೊಳ್ಳಲಿದ್ದಾರೆ.