ನವದೆಹಲಿ: ಸಿಬಿಎಸ್ಇ ಮಂಡಳಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರಿಗೆ ಭಾನುವಾರ ಪತ್ರ ಬರೆದಿದ್ದಾರೆ.
ಕೊರೋನಾ ಸಾಂಕ್ರಾಮಿಕ ರೋಗ ಉಲ್ಬಣವಾಗುತ್ತಿರುವ ಸಮಯದಲ್ಲಿ ಮಕ್ಕಳಿಗೆ ಪರೀಕ್ಷೆ ನಡೆಸಿದರೆ ತೊಂದರೆಗೊಳಗಾಗುವ ಸಾಧ್ಯತೆ ಇದೆ. ಪರೀಕ್ಷಾ ಕೇಂದ್ರದಲ್ಲಿ ಹೆಚ್ಚಿನ ಸಂಖ್ಯೆಯ ಮಕ್ಕಳು ಸೇರುವುದರಿಂದ ಸೋಂಕಿಗೆ ಒಳಗಾಗುವ ತಾಣವಾಗಲಿದೆ. ಹೀಗಾದರೆ ಸರ್ಕಾರ ಮತ್ತು ಸಿಬಿಎಸ್ಇ ಮಂಡಳಿಯು ಜವಾಬ್ದಾರರಾಗಿರುತ್ತದೆ ಎಂದು ಹೇಳಿದ್ದಾರೆ.
COVID-19 ಪ್ರಕರಣಗಳು ದೇಶಾದ್ಯಂತ ವರದಿಯಾಗುತ್ತಿದ್ದು, COVID-19 ರ ಎರಡನೇ ಅಲೆ ಆತಂಕದಿಂದ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಗಳಿಗೆ ಬರಲು ಲಕ್ಷಾಂತರ ಮಕ್ಕಳು ಮತ್ತು ಪೋಷಕರು ಭಯ ಮತ್ತು ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಮಾರಣಾಂತಿಕ ಕಾಯಿಲೆಯ ಭೀತಿಯಡಿಯಲ್ಲಿ ಪರೀಕ್ಷೆಗಳನ್ನು ನಡೆಸುವುದರಿಂದ ಮಕ್ಕಳಿಗೆ ಅನಗತ್ಯ ಆತಂಕ ಉಂಟಾಗುತ್ತದೆ ಮತ್ತು ಅವರ ಸಾಮರ್ಥ್ಯದ ಮೇಲೂ ಪರಿಣಾಮ ಬೀರುತ್ತದೆ ಎಂದು ತಿಳಿಸಿದ್ದು, ಪರೀಕ್ಷೆಗಳನ್ನು ರದ್ದುಗೊಳಿಸಬೇಕೆಂದು ಅವರು ವಿನಂತಿಸಿದ್ದಾರೆ.
ಸರ್ಕಾರವು ಶಾಲೆಗಳು, ವಿದ್ಯಾರ್ಥಿಗಳು ಮತ್ತು ಅವರ ಪೋಷಕರೊಂದಿಗೆ ಚರ್ಚಿಸಬೇಕು. ಶೈಕ್ಷಣಿಕ ಜವಾಬ್ದಾರಿಗಳನ್ನು ಪೂರೈಸಲು ಸುರಕ್ಷಿತ ಮಾರ್ಗವನ್ನು ಕಂಡುಕೊಳ್ಳಬಹುದು. ಅಪಾಯಕಾರಿ ಪರಿಸ್ಥಿತಿಗೆ ಮಕ್ಕಳನ್ನು ನೂಕುವ ಬದಲು, ಇಂತಹ ಸಮಯದಲ್ಲಿ ಅವರಿಗೆ ಬೆಂಬಲ, ಪ್ರೋತ್ಸಾಹ ಮತ್ತು ರಕ್ಷಣೆ ನೀಡಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.