ಬೆಂಗಳೂರು: ಅನ್ಯ ಕರ್ತವ್ಯ, ನಿಯೋಜನೆ ಮೇಲೆ ಇರುವ ಕಂದಾಯ ಇಲಾಖೆಯ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳನ್ನು ಬಿಡುಗಡೆಗೊಳಿಸಿ ನೇಮಕವಾದ ಮೂಲಹುದ್ದೆಯಲ್ಲಿ ಕಾರ್ಯನಿರ್ವಹಿಸಲು ಕೂಡಲೇ ಸೂಚಿಸಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರು ಜನವರಿ 27 ರೊಳಗೆ ಮೂಲ ಹುದ್ದೆಗೆ ಕಳುಹಿಸುವಂತೆ ಜಿಲ್ಲಾಧಿಕಾರಿಗಳು, ಪ್ರಾದೇಶಿಕ ಆಯುಕ್ತರು, ಉಪವಿಭಾಗಾಧಿಕಾರಿ ಮತ್ತು ತಹಶೀಲ್ದಾರ್ ಗಳಿಗೆ ಸೂಚನೆ ನೀಡಿದ್ದಾರೆ.
ಕಂದಾಯ ಇಲಾಖೆ ಸೇವೆಗಳನ್ನು ಡಿಜಿಟಲೀಕರಣ ಮಾಡುವ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ವಿಎಗಳು ಬೇರೆ ಸ್ಥಳದಲ್ಲಿ ಕೆಲಸ ಮಾಡುವುದರಿಂದ ಕಚೇರಿ ಸಿಬ್ಬಂದಿ ಮೇಲೆ ಹೆಚ್ಚು ಕಾರ್ಯದ ಒತ್ತಡ ಉಂಟಾಗುತ್ತಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಗಳು ಕೂಡಲೇ ವಿಎಗಳನ್ನು ಬಿಡುಗಡೆಗೊಳಿಸಬೇಕೆಂದು ಸೂಚಿಸಲಾಗಿದೆ. ಸೂಚನೆ ಉಲ್ಲಂಘಿಸಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.