ಬೆಂಗಳೂರು: ಘಟಾನುಘಟಿ ನಾಯಕರ ಸ್ಪರ್ಧೆಯಿಂದಾಗಿ ರಾಜ್ಯದ ಗಮನ ಸೆಳೆದ ಹೈವೋಲ್ಟೇಜ್ ಕ್ಷೇತ್ರಗಳ ಬಗ್ಗೆ ಮಾಹಿತಿ ಇಲ್ಲಿದೆ. ಈ ಕ್ಷೇತ್ರಗಳ ಫಲಿತಾಂಶದ ಬಗ್ಗೆ ಕುತೂಹಲ ಹೆಚ್ಚಾಗಿದೆ. ನಾಳೆ ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಅಂದು ಘಟನೆ ನಾಯಕರ ಭವಿಷ್ಯ ನಿರ್ಧಾರವಾಗಲಿದೆ.
ರಾಜ್ಯದ ಗಮನ ಸೆಳೆದ ಪ್ರಮುಖ ಕ್ಷೇತ್ರಗಳಲ್ಲಿ ಒಂದಾದ ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿಯಿಂದ ಸಚಿವ ವಿ. ಸೋಮಣ್ಣ ಸ್ಪರ್ಧಿಸಿದ್ದಾರೆ.
ಶಿಗ್ಗಾಂವಿ ಕ್ಷೇತ್ರದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಬಿಜೆಪಿಯಿಂದ ಸ್ಪರ್ಧಿಸಿದ್ದು, ಕಾಂಗ್ರೆಸ್ ನಿಂದ ಯಾಸಿರ್ ಖಾನ್ ಪಠಾನ್ ಸ್ಪರ್ಧಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಪರ್ಧಿಸಿರುವ ಕನಕಪುರ ಕ್ಷೇತ್ರದಲ್ಲಿ ಸಚಿವ ಆರ್. ಅಶೋಕ್ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.
ಮತ್ತೊಂದು ಪ್ರಮುಖ ಕ್ಷೇತ್ರ ಚನ್ನಪಟ್ಟಣದಲ್ಲಿ ಜೆಡಿಎಸ್ ನಿಂದ ಮಾಜಿ ಸಿಎಂ ಕುಮಾರಸ್ವಾಮಿ, ಬಿಜೆಪಿಯಿಂದ ಸಿ.ಪಿ. ಯೋಗೇಶ್ವರ್ ಸ್ಪರ್ಧಿಸಿದ್ದಾರೆ.
ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಜಗದೀಶ್ ಶೆಟ್ಟರ್, ಬಿಜೆಪಿಯಿಂದ ಮಹೇಶ್ ಟೆಂಗಿನಕಾಯಿ ಸ್ಪರ್ಧಿಸಿದ್ದಾರೆ.
ಹಾಸನ ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರೀತಂ ಗೌಡ, ಜೆಡಿಎಸ್ ನಿಂದ ಸ್ವರೂಪ್ ಪ್ರಕಾಶ್ ಸ್ಪರ್ಧಿಸಿದ್ದು, ಈ ಕ್ಷೇತ್ರವು ಕೂಡ ಗಮನ ಸೆಳೆದ ಕ್ಷೇತ್ರವಾಗಿದೆ.
ಬಳ್ಳಾರಿ ನಗರ ಕ್ಷೇತ್ರದಲ್ಲಿ ಹಾಲಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಬಿಜೆಪಿ ಅಭ್ಯರ್ಥಿಯಾಗಿದ್ದು, ಸೋದರ ಜನಾರ್ಧನ ರೆಡ್ಡಿ ಅವರ ಪತ್ನಿ ಲಕ್ಷ್ಮಿ ಅರುಣಾ ಅವರು ಕಣದಲ್ಲಿರುವುದು ವಿಶೇಷವಾಗಿದೆ.
ಅಥಣಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಬಿಜೆಪಿಯಿಂದ ಮಹೇಶ್ ಕುಮಟಳ್ಳಿ ಸ್ಪರ್ಧಿಸಿದ್ದಾರೆ.