ಭೋಪಾಲ್: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಘುಂಗಟಿ ಪೊಲೀಸ್ ಪೋಸ್ಟ್ ಪ್ರದೇಶದ ಮಜ್ಗಾವಾ ಗ್ರಾಮದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 43ರಲ್ಲಿ ಈ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದರು. ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಾಯಾಳುಗಳು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಮೃತರೆಲ್ಲರೂ 30-35 ವರ್ಷದವರಾಗಿದ್ದಾರೆ. ಇವರಲ್ಲಿ ಮೂವರು ಸರ್ಕಾರಿ ಉದ್ಯೋಗಿಗಳು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಕಾರು ಉಮಾರಿಯಾ ಜಿಲ್ಲೆಯಿಂದ ಶಹದೋಲ್ ಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ.