ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವತಿಯಿಂದ ಸರ್ಕಾರಕ್ಕೆ ಸಲ್ಲಿಕೆಯಾದ ಜಾತಿ ಗಣತಿ ಬಗ್ಗೆ ಸುದೀರ್ಘ ವಿಚಾರಣೆ ಅಗತ್ಯವಿರುವ ಹಿನ್ನೆಲೆಯಲ್ಲಿ ಅದುವರೆಗೆ ಯಾವುದೇ ಆದೇಶ ನೀಡುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ) ನಡೆಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ 2014ರ ಜನವರಿ 23ರಂದು ನೀಡಿದ್ದ ಆದೇಶ ರದ್ದು ಮಾಡುವಂತೆ ಕೋರಿ ಬೀದರ್ ನ ಶಿವರಾಜ ಕಣಶೆಟ್ಟಿ ಮತ್ತಿತರರು ಸಲ್ಲಿಸಿದ ಅರ್ಜಿಗಳ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ನೇತೃತ್ವದ ವಿಭಾಗೀಯ ಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿವೆ.
ಅಡ್ವೊಕೇಟ್ ಜನರ ಶಶಿಕಿರಣ್ ಶೆಟ್ಟಿ, ಹಿಂದುಳಿದ ವರ್ಗಗಳ ಆಯೋಗದಿಂದ ವರದಿಯನ್ನು ಸರ್ಕಾರ ಫೆಬ್ರವರಿ 29ರಂದು ಸ್ವೀಕರಿಸಿದ್ದು, ಇನ್ನು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರಮಾಣ ಪತ್ರದ ಮೂಲಕ ತಿಳಿಸಿದ್ದಾರೆ. ಈ ಕುರಿತು ಸಲ್ಲಿಕೆಯಾದ ಅರ್ಜಿ ಸಂಬಂಧ ಸರ್ಕಾರ ಆಕ್ಷೇಪಣೆ ಸಲ್ಲಿಸಬೇಕೆಂದು ನ್ಯಾಯಪೀಠ ತಿಳಿಸಿದೆ. ಒಂದು ವಾರದಲ್ಲಿ ಆಕ್ಷೇಪಣೆ ಸಲ್ಲಿಸುವುದಾಗಿ ಅಡ್ವೊಕೇಟ್ ಜನರಲ್ ತಿಳಿಸಿದ್ದಾರೆ.
ಮಧ್ಯಪ್ರವೇಶ ಮಾಡಿದ ಅರ್ಜಿದಾರರ ಪರ ವಕೀಲರು, ವರದಿ ಸಂಬಂಧ ಯಾವುದೇ ಕ್ರಮಕ್ಕೆ ಮುಂದಾಗದಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿದ ನ್ಯಾಯಪೀಠ, ಅರ್ಜಿಗಳ ಸಂಬಂಧ ಸುದೀರ್ಘ ವಿಚಾರಣೆ ನಡೆಸಬೇಕಿದ್ದು, ಆದ್ದರಿಂದ ತಕ್ಷಣಕ್ಕೆ ಯಾವುದೇ ಆದೇಶ ನೀಡಲಾಗದು ಎಂದು ಹೇಳಿ ವಿಚಾರಣೆಯನ್ನು ಮಾರ್ಚ್ 21ಕ್ಕೆ ಮುಂದೂಡಿದೆ.