ಬೆಂಗಳೂರು: ಜಾತಿ ಪ್ರಮಾಣ ಪತ್ರ ಪಡೆದುಕೊಳ್ಳಲು ಶಾಲಾ ದಾಖಲಾತಿಯೇ ಪ್ರಮುಖ ಆಧಾರವಾಗಿದೆ. ಶಾಲಾ ದಾಖಲಾತಿ ಸಂದರ್ಭದಲ್ಲಿ ಎಚ್ಚರಿಕೆ ವಹಿಸಬೇಕಾಗುತ್ತದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ ಗೂಳಿಹಟ್ಟಿ ಶೇಖರ್, ಕಾಡುಗೊಲ್ಲ ಸಮುದಾಯದ ಜನರಿಗೆ ಜಾತಿ ಪ್ರಮಾಣ ಪತ್ರ ಪಡೆಯಲು ತೊಂದರೆಯಾಗಿದೆ ಎಂದರು. ಅಧಿಕಾರಿಗಳು ಕಾಡುಗೊಲ್ಲ ಜಾತಿಯ ಪ್ರಮಾಣ ಪತ್ರ ನೀಡಲು ನಿರಾಕರಿಸುತ್ತಿದ್ದಾರೆ. ಗೊಲ್ಲ ಜಾತಿಯ ಪ್ರಮಾಣ ಪತ್ರ ವಿತರಿಸುತ್ತಿರುವುದರಿಂದ ಜನರಿಗೆ ತೊಂದರೆಯಾಗಿದೆ ಎಂದು ದೂರಿದರು.
ಸಚಿವ ಮಾಧಾಸ್ವಾಮಿ ಪ್ರತಿಕ್ರಿಯೆ ನೀಡಿ, ಜಾತಿ ಪ್ರಮಾಣ ಪತ್ರ ವಿತರಣೆಗೆ ಶಾಲಾ ದಾಖಲಾತಿಯೇ ಪ್ರಮುಖ ಆಧಾರವಾಗಿದೆ. ಶಾಲಾ ದಾಖಲಾತಿಯಲ್ಲಿ ಗೊಲ್ಲ ಸಮುದಾಯದ ಹೆಸರು ಬರೆಸಿ ಈಗ ಕಾಡುಗೊಲ್ಲ ಜಾತಿ ಪ್ರಮಾಣ ಪತ್ರ ಕೇಳಿದರೆ ಕೊಡುವುದು ಕಷ್ಟ. ಶಾಲಾ ದಾಖಲಾತಿ ಸಂದರ್ಭದಲ್ಲಿ ಎಚ್ಚರಿಕೆ ವಹಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.