ಬೆಂಗಳೂರು: ರಾಜ್ಯದಲ್ಲಿ ಕಾವೇರಿ ನೀರಿಗಾಗಿ ಹೋರಾಟ ಭುಗಿಲೆದ್ದಿದೆ. ರೈತರು ಹಾಗೂ ಕನ್ನಡ ಪರ ಸಂಘಟನೆಗಳು ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಸ್ಯಾಂಡಲ್ ವುಡ್ ನಟ ನೆನಪಿರಲಿ ಪ್ರೇಮ್ ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದು, ಪ್ರಧಾನಿ ನರೇಂದ್ರ ಮೊದಿಯವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಬೆಂಗಳೂರು ಬಂದ್, ಕರ್ನಾಟಕ ಬಂದ್ ಗೆ ಕರೆ ನೀಡಲಾಗಿತ್ತು. ಕನ್ನಡ ಚಿತ್ರರಂಗವೇ ಹೋರಾಟಕ್ಕೆ ಸಾಥ್ ನೀಡಿ ನಟ-ನಟಿಯರು ಪ್ರತಿಭಟನೆ ನಡೆಸುವ ಮೂಲಕ ಕಾವೇರಿ ನೀರಿಗಾಗಿ ಒತ್ತಾಯಿಸಿದ್ದರು. ಈ ನಡುವೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ಅ.15ರವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಸಿಡಬ್ಲುಆರ್ ಸಿ ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿಯುವ ಮೂಲಕ ತಮಿಳುನಾಡಿಗೆ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.
ಇದರಿಂದಾಗಿ ರೈತರು ಹಾಗೂ ಕನ್ನಡಪರ ಸಂಘಟನೆಗಳು ಪ್ರತಿಭಟನೆ ಮುಂದುವರೆಸಿದ್ದಾರೆ. ಇದೀಗ ಕಾವೇರಿ ಹೋರಾಟಕ್ಕೆ ನಟ ಪ್ರೇಮ್ ಕೂಡ ಕೈಜೋಡಿಸಿದ್ದು, ರೈತರ, ಕನ್ನಡಿಗರ ಹೋರಾಟಕ್ಕೆ ಸಾಥ್ ನೀಡಿದ್ದಾರೆ.
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ರಕ್ತದಲ್ಲಿ ಪತ್ರ ಬರೆದಿರುವ ಪ್ರೇಮ್, ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಕಾವೇರಿ ನಮ್ಮದು. ಈ ವಿಚಾರವಾಗಿ ಕನ್ನಡಿಗರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ.