ಬೆಂಗಳೂರು: ತಮಿಳುನಾಡಿಗೆ ಇನ್ನೂ 15 ದಿನಗಳ ಕಾಲ ಪ್ರತಿದಿನ 5000 ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ.
ರಾಜಧಾನಿ ಬೆಂಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ರೈತಪರ ಸಂಘಟನೆಗಳು, ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕನ್ನಡಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಿದ್ದು, ಸುಪ್ರೀಂ ಕೋರ್ಟ್ ಆದೇಶ ರಾಜ್ಯಕ್ಕೆ ಮಾಡಿರುವ ಅನ್ಯಾಯ ಎಂದು ಆಕ್ರೋಶ ವ್ಯಕ್ತಪಡಿಸಿವೆ.
ಮೈಸೂರಿನಲ್ಲಿ ರೈತ ಸಂಘಟನೆಗಳು ಪೊರಕೆ ಚಳುವಳಿ ನಡೆಸಿವೆ. ಇನ್ನೊಂದೆಡೆ ಮಂಡ್ಯದಲ್ಲಿ ರೈತರು ಹಾಗೂ ಕನ್ನಡಪರ ಸಂಘಟನೆಗಳು ಪ್ರತಿಭಟನೆ ತೀವ್ರಗೊಳಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.
ಬೆಂಗಳೂರಿನಲ್ಲಿ ನಾರಾಯಣಗೌಡ ನೇತೃತ್ವದಲ್ಲಿ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನಾ ರ್ಯಾಲಿ ನಡೆಸಿದ್ದು, ವಿಧಾನಸೌಧ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ರಾಜ್ಯದ ರೈತರಿಗೆ ಮರಣ ಶಾಸನ. ತಕ್ಷಣ ಆದೇಶ ಹಿಂಪಡೆಯಬೇಕು. ಯಾವುದೇ ಕಾರಣಕ್ಕೂ ಸರ್ಕಾರ ತಮಿಳುನಾಡಿಗೆ ನೀರು ಬಿಡಬಾರದು ಎಂದು ನಾರಾಯಣಗೌಡ ಎಚ್ಚರಿಸಿದ್ದಾರೆ. ಒಂದು ವೇಳೆ ತಮಿಳುನಾಡಿಗೆ ನೀರು ಹರಿಸಿದರೆ ರಾಜ್ಯಾದ್ಯಂತ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ಕಿಡಿಕಾರಿದ್ದಾರೆ.