ಮಂಡ್ಯ : ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಮಂಡ್ಯದಲ್ಲಿ ರೈತರು ರಾಜ್ಯ ಸರ್ಕಾರದ ವಿರುದ್ಧ ಇಂದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಂಗಳೂರು ಮೈಸೂರು ಹೆದ್ದಾರಿ ತಡೆಯಲು ಯತ್ನಿಸಿದ ಪೊಲೀಸರು ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೆದು ತಳ್ಳಾಟ-ನೂಕಾಟ ನಡೆದಿದೆ. ಈ ಸಂದರ್ಭದಲ್ಲಿ ಪ್ರತಿಭಟನಾ ನಿರತ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನಾ ನಿರತ ರೈತರನ್ನು ಕೆಎಸ್ಆರ್ ಟಿಸಿ ಬಸ್ ನಲ್ಲಿ ತುಂಬಿಸಿಕೊಂಡು ತಮ್ಮ ವಶಕ್ಕೆ ಪಡೆದಿದ್ದಾರೆ.
ತಮಿಳುನಾಡಿನ ಒತ್ತಡಕ್ಕೆ ಮಣಿದು ಕರ್ನಾಟಕ ರಾಜ್ಯ ಸರ್ಕಾರವು ನೀರು ಬಿಡುಗಡೆಗೆ ಆದೇಶಿಸಿದ್ದು, ಒಂದು ವಾರದಿಂದಲೂ ನೀರು ಹರಿಯುತ್ತಿದೆ. ಇದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಿನ್ನೆ ಪ್ರತಿಭಟನೆ ನಡೆಸಿದ್ದರು. ಇಂದು ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ರೈತರು ನಿರ್ಧರಿಸಿದ್ದರು. ಆದರೆ ಇದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ. ಈ ಹಿನ್ನೆಲೆ ಪ್ರತಿಭಟನೆಯ ಕಾವು ಜೋರಾಗಿದೆ.ನೆರೆ ರಾಜ್ಯ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿ ರೈತರಿಗೆ ಅನ್ಯಾಯ ಮಾಡಿರುವ ರಾಜ್ಯ ಸರ್ಕಾರದ ನಡೆ ವಿರೋಧಿಸಿ ರಾಜ್ಯ ಬಿಜೆಪಿ ಮಂಡ್ಯದ ಸಂಜಯ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆದಿದೆ.