ಬೆಂಗಳೂರು: ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಕೇಂದ್ರ ಅಬಕಾರಿ ಸೇವಾ ತೆರಿಗೆ ಮಾಜಿ ಅಧೀಕ್ಷಕ ಜಿತೇಂದ್ರ ಕುಮಾರ್ ದಾಗೂರ್ ಅವರಿಗೆ ಮೂರು ವರ್ಷ ಜೈಲು, 5 ಲಕ್ಷ ರೂಪಾಯಿ ದಂಡ ವಿಧಿಸಿ ಸಿಬಿಐ ವಿಶೇಷ ನ್ಯಾಯಾಲಯ ಆದೇಶಿಸಿದೆ.
2021ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ವಲಯದ ಜಿಎಸ್‌ಟಿ ಅಧೀಕ್ಷಕರಾಗಿ ಜಿತೇಂದ್ರ ಕುಮಾರ್ ಕಾರ್ಯನಿರ್ವಹಿಸುತ್ತಿದ್ದರು. ಅವರು ಉದ್ಯಮಿಯೊಬ್ಬರ ಉದ್ದಿಮೆ ವಹಿವಾಟಿಗೆ ಸಂಬಂಧಿಸಿದಂತೆ 2015-16ನೇ ಸಾಲಿನ ತೆರಿಗೆ ಮತ್ತು ದಂಡ ರದ್ದು ಮಾಡಲು 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು.
2021ರ ನವೆಂಬರ್ ನಲ್ಲಿ ಸಿಬಿಐ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆ ವೇಳೆ ಉದ್ಯಮಿ ಬಳಿ 25 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಜಿತೇಂದ್ರ ಕುಮಾರ್ ಅವರನ್ನು ಬಂಧಿಸಲಾಗಿದ್ದು, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಸಿಬಿಐ ಅಧಿಕಾರಿಗಳು ದೋಷಾರೋಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ ಮೂರು ವರ್ಷ ಜೈಲು, 5 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.