ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
ದುರ್ಗಾಪೂಜೆ ಸಂಭ್ರಮಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಎಲ್ಲರನ್ನೂ ಜೊತೆಯಾಗಿ ಕರೆದೊಯ್ಯುವೆ ಎಂದು ಭಾಷಣ ಮಾಡುತ್ತಾರೆ. ಆದರೆ ಪ್ರತಿಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳನ್ನು ಗುರಿಯಾಗಿಸಿಕೊಂಡು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಗಾಲು ಹಾಕುತ್ತಾರೆ ಎಂದಿದ್ದಾರೆ.
ಕೇಂದ್ರೀಯ ತನಿಖಾ ಸಂಸ್ಥೆಗಳಾದ ಸಿಬಿಐ, ಜಾರಿ ನಿರ್ದೇಶನಾಲಯ ಮೊದಲಾದವುಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇರುವೆ ಕಚ್ಚಿದರೂ ಸಹ ಈ ಸಂಸ್ಥೆಗಳ ಮೂಲಕ ತನಿಖೆ ನಡೆಸಲಾಗುತ್ತಿದೆ ಎಂದು ವ್ಯಂಗ್ಯವಾಡಿದ ಮಮತಾ ಬ್ಯಾನರ್ಜಿ, ಅನುದಾನಗಳಿಗೆ ಕೇಂದ್ರ ಸರ್ಕಾರ ಅಡ್ಡಗಾಲು ಹಾಕುತ್ತಿರುವುದರಿಂದ ಖಜಾನೆಯಲ್ಲಿ ಹಣ ಸಂಗ್ರಹಣ ಕಡಿಮೆಯಾಗಿದೆ. ಇದರಿಂದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಕಿಡಿ ಕಾರಿದ್ದಾರೆ.