ನವದೆಹಲಿ: ದೇಶದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮತ್ತು ವಿದ್ಯಾರ್ಥಿಗಳ ಸುರಕ್ಷತೆಯನ್ನು ಪರಿಗಣಿಸಿ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಚಿವರ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಈಗಾಗಲೇ 10 ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಲಾಗಿದ್ದು, ಇದರ ಮುಂದುವರೆದ ಭಾಗವಾಗಿ 12 ನೇ ತರಗತಿ ಪರೀಕ್ಷೆ ಕೂಡ ರದ್ದು ಮಾಡಲು ತೀರ್ಮಾನಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವರು, ಕ್ಯಾಬಿನೆಟ್ ಕಾರ್ಯದರ್ಶಿ ಮತ್ತು ಇತರ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ, 12 ನೇ ತರಗತಿ ಸಿಬಿಎಸ್ಇ ಮಂಡಳಿಯ ಪರೀಕ್ಷೆಗಳ ಪರಿಸ್ಥಿತಿ ಕುರಿತು ಚರ್ಚಿಸಿದರು. ಸಭೆಯಲ್ಲಿ ಪರೀಕ್ಷೆ ನಡೆಸಲು ಸಾಧ್ಯವಿರುವ ಎಲ್ಲ ಆಯ್ಕೆಗಳನ್ನು ಪರಿಶೀಲಿಸಲಾಗಿದೆ.
ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಸಭೆಯಲ್ಲಿ ಭಾಗಿಯಾಗಿ ಸಲಹೆ ನೀಡಿದ್ದಾರೆ.
12 ನೇ ತರಗತಿ ಸಿಬಿಎಸ್‌ಇ ಪರೀಕ್ಷೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ರದ್ದು ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
COVID-19 ಶೈಕ್ಷಣಿಕ ಕ್ಯಾಲೆಂಡರ್ ಮೇಲೆ ಪರಿಣಾಮ ಬೀರಿದೆ. ಬೋರ್ಡ್ ಪರೀಕ್ಷೆಗಳ ವಿಚಾರ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಲ್ಲಿ ಅಪಾರ ಆತಂಕವನ್ನು ಉಂಟುಮಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಈ ನಡುವೆ, ಸುಪ್ರೀಂ ಕೋರ್ಟ್ ಜೂನ್ 3 ರಂದು 12 ನೇ ತರಗತಿ ಪರೀಕ್ಷೆಗೆ ಸಂಬಂಧಿಸಿದ ಅರ್ಜಿಯನ್ನು ಆಲಿಸಲಿದ್ದು, ಕೇಂದ್ರ ಸರ್ಕಾರ ನಿರ್ಧಾರ ತಿಳಿಸಲಿದೆ. ವಕೀಲೆ ಮಮತಾ ಶರ್ಮಾ ಸಲ್ಲಿಸಿದ್ದ ಮನವಿಯಲ್ಲಿ 12 ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದ್ದರು. ಸುಪ್ರೀಂ ಕೋರ್ಟ್ ಈ ಮನವಿ ವಿಚಾರಣೆಯನ್ನು ಜೂನ್ 3 ರವರೆಗೆ ಮುಂದೂಡಿದೆ.