ನವದೆಹಲಿ: ಕೊರೊನಾ ಕಾರಣದಿಂದ ಮುಂದೂಡಲ್ಪಟ್ಟ ಸಿಬಿಎಸ್ಇ 12 ನೇ ತರಗತಿ ಪರೀಕ್ಷೆ ಬಗ್ಗೆ ಇಂದು ನಡೆಯಲಿರುವ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ.
ಕೇಂದ್ರ ಶಿಕ್ಷಣ ಸಚಿವಾಲಯ ಉನ್ನತ ಮಟ್ಟದ ಸಭೆ ಕರೆದಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿರುವ ಸಭೆಯಲ್ಲಿ ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಪ್ರಕಾಶ್ ಜಾವಡೇಕರ್, ಎಲ್ಲ ರಾಜ್ಯಗಳ ಶಿಕ್ಷಣ ಸಚಿವರು, ಶಿಕ್ಷಣ ಇಲಾಖೆ ಕಾರ್ಯದರ್ಶಿಗಳು, ಪರೀಕ್ಷಾ ಮಂಡಳಿಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ.
ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಈ ಬಗ್ಗೆ ಮಾಹಿತಿ ನೀಡಿದ್ದು, 12 ನೇ ತರಗತಿ ಪರೀಕ್ಷೆ ಹಾಗೂ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶ ಪರೀಕ್ಷೆಗಳನ್ನು ನಡೆಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಈಗಾಗಲೇ ಶಿಕ್ಷಣ ಸಚಿವರು, ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರಿಂದ ಮಾಹಿತಿ, ಸಲಹೆ ಪಡೆಯಲಾಗಿದೆ. ಇಂದು ನಡೆಯಲಿರುವ ಉನ್ನತ ಮಟ್ಟದ ಸಭೆಯಲ್ಲಿ ಮುಂದೂಡಲಾದ 12ನೇ ತರಗತಿ ಪರೀಕ್ಷೆ ರದ್ದು ಮಾಡಬೇಕೆ? ನಡೆಸಬೇಕೆ? ಎಂಬುದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ.