ಭಾರತೀಯ ಮೆಕ್ಕೆಜೋಳ ಸಂಶೋಧನಾ ಸಂಸ್ಥೆಯ ಪ್ರಾದೇಶಿಕ ಕೇಂದ್ರವನ್ನು ಶಿವಮೊಗ್ಗಕ್ಕೆ ಸ್ಥಳಾಂತರಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಗೀರಥ ಚೌಧರಿ ಮಂಗಳವಾರದಂದು ಸಂಸತ್ತಿನಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ.
ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಭಗೀರಥ ಚೌಧರಿ, 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಮೆಕ್ಕೆಜೋಳ ಸಂಶೋಧನಾ ಸಂಸ್ಥೆಯ ಪ್ರಾದೇಶಿಕ ಕೇಂದ್ರವನ್ನು ಶಿವಮೊಗ್ಗಕ್ಕೆ ಸ್ಥಳಾಂತರಿಸಲು ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಅಲ್ಲದೆ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಹಾಗೂ ಧಾರವಾಡದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಮೂಲಕ ಮೆಕ್ಕೆಜೋಳ ಸಂಶೋಧನಾ ಚಟುವಟಿಕೆಗಳನ್ನು ನಡೆಸಿ ಪ್ರಚಾರ ಮಾಡಲಾಗುತ್ತಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.