ನವದೆಹಲಿ: ದೇಶದ ಜನತೆಗೆ ಫೆಬ್ರವರಿಯಿಂದ ಕೊರೋನಾ ವ್ಯಾಕ್ಸಿನೇಷನ್ ಕಾರ್ಯ ಆರಂಭವಾಗಲಿದ್ದು, ಲಸಿಕೆಯ ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸಲಿದೆ. ಬಜೆಟ್ ನಲ್ಲಿ ಈ ಕುರಿತಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಶೀಘ್ರವೇ ಕೊರೋನಾ ಲಸಿಕೆ ಲಭ್ಯವಾಗಲಿದ್ದು, ಮೊದಲ ಹಂತದಲ್ಲಿ ಆರೋಗ್ಯ ಕ್ಷೇತ್ರದ ಸಿಬ್ಬಂದಿ ಸೇರಿದಂತೆ ಕೊರೋನಾ ವಾರಿಯರ್ಸ್ ಗಳಿಗೆ ನೀಡಲಾಗುತ್ತದೆ. ಲಸಿಕೆಯನ್ನು ದೇಶದ ಜನರಿಗೆ ನೀಡುವ ಉದ್ದೇಶದಿಂದ ಸಂಪೂರ್ಣ ಯೋಜನೆಯನ್ನು ತಯಾರಿಸಲಾಗಿದೆ. ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಅಗತ್ಯ ವ್ಯವಸ್ಥೆಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸೂಚನೆ ನೀಡಲಾಗಿದೆ.
ಆರೋಗ್ಯ ಮೂಲಸೌಕರ್ಯಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ತಿಳಿಸಲಾಗಿದ್ದು, ಮುಖ್ಯಮಂತ್ರಿಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಈ ಕುರಿತಾಗಿ ಸೂಚನೆ ನೀಡಿದ್ದಾರೆ.
ಲಸಿಕೆ ಉತ್ಪಾದನೆ ಮತ್ತು ವಿತರಣೆಯ ಪ್ರಕ್ರಿಯೆಯ ಬಗ್ಗೆ ಖುದ್ದಾಗಿ ತಿಳಿಯಲು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಪುಣೆಯ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಕ್ಕೆ ಭೇಟಿ ನೀಡಲಿದ್ದಾರೆ. ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಜಾಗತಿಕ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ ಮತ್ತು ಆಕ್ಸ್ ಫರ್ಡ್ ಯೂನಿವರ್ಸಿಟಿ ಫಾರ್ ಕೋವಿಡ್ -19 ಲಸಿಕೆಯೊಂದಿಗೆ ಪಾಲುದಾರಿಕೆ ಹೊಂದಿದೆ.