
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -2 ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆ ಫಲಿತಾಂಶ ಘೋಷಣೆಯಾದ ನಂತರವೇ ಸಿಇಟಿ ಫಲಿತಾಂಶ ಪ್ರಕಟಿಸಲಾಗುವುದು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮೇ 20ರಂದು ಸಿಇಟಿ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ವದಂತಿ ಹರಡಿದ್ದು, ಇದು ಸತ್ಯಕ್ಕೆ ದೂರವಾದ ಸಂಗತಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದ್ವಿತೀಯ ಪಿಯುಸಿ ವಿಜ್ಞಾನ ವಿಷಯಗಳಲ್ಲಿ ವಿದ್ಯಾರ್ಥಿಗಳು ಪಡೆದ ಶೇಕಡ 50ರಷ್ಟು ಅಂಕ ಸೇರಿಸಿ ಸಿಇಟಿ ರ‍್ಯಾಂಕ್ ಪಟ್ಟಿ ಪ್ರಕಟಿಸಬೇಕಾಗುತ್ತದೆ. ಇದು ಮೊದಲಿನಿಂದಲೂ ಪಾಲಿಸುತ್ತಿರುವ ನಿಯಮವಾಗಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆ ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೋ ಅದೇ ಅಂಕಗಳನ್ನು ಪರಿಗಣಿಸಬೇಕಾಗುತ್ತದೆ. ಹೀಗಾಗಿ ಎರಡನೇ ಪರೀಕ್ಷೆ ಫಲಿತಾಂಶಕ್ಕಾಗಿ ಕಾಯುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.
ಬಿಎಸ್ಸಿ ಕೃಷಿ ಪದವಿಗೆ ಪ್ರವೇಶ ನೀಡಲು ಕೃಷಿಗೆ ಕೃಷಿ ಪ್ರಾಯೋಗಿಕ ಪರೀಕ್ಷೆಯನ್ನು ಮೇ 25ಕ್ಕೆ ನಿಗದಿ ಮಾಡಿದೆ. ಅದರ ಫಲಿತಾಂಶ ಕೂಡ ಬರಬೇಕಿದ್ದು, ಇದು ಸಿಇಟಿ ರ್ಯಾಂಕಿಂಗ್ ಗೆ ಅನಿವಾರ್ಯ ಎಂದು ಹೇಳಿದ್ದಾರೆ.