ಬೆಂಗಳೂರು: ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಪಿಎಫ್ಐ ಮತ್ತು ಎಸ್‌ಡಿಪಿಐ ಸಂಘಟನೆ ನಿಷೇಧಕ್ಕೆ ಒತ್ತಾಯಿಸಿ ಬೆಂಗಳೂರಿನ ಟೌನ್ ಹಾಲ್ ಮುಂದೆ ಪ್ರತಿಭಟನೆ ನಡೆಸಿದ ಸಂಬಂಧ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು.
ಪ್ರಕರಣ ರದ್ದುಪಡಿಸುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕ ಸದಸ್ಯ ಪೀಠ ಪ್ರಕರಣ ರದ್ದುಗೊಳಿಸಿ ಆದೇಶ ಹೊರಡಿಸಿದೆ. ನಿಯಮದ ಪ್ರಕಾರ ಇನ್ಸ್ಪೆಕ್ಟರ್ ಗೆ ದೂರು ದಾಖಲಿಸುವ ಅಧಿಕಾರವಿಲ್ಲ. ಈ ಪ್ರಕರಣದಲ್ಲಿ ಇನ್ಸ್ಪೆಕ್ಟರ್ ಖಾಸಗಿ ದೂರು ದಾಖಲಿಸಿರುವುದು ಮತ್ತು ಅದನ್ನು ಪರಿಗಣಿಸಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಕ್ರಮ ಜರುಗಿಸುವುದು ಕಾನೂನು ಬಾಹಿರ ಎಂದು ಅರ್ಜಿದಾರರ ಪರ ವಕೀಲರ ವಾದವನ್ನು ನ್ಯಾಯಪೀಠ ಎತ್ತಿ ಹಿಡಿದು ಪ್ರಕರಣ ರದ್ದುಗೊಳಿಸಿದೆ.