ಕಾರವಾರ: ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕೇಸ್ ದಾಖಲಾಗಿದೆ.
ಜನಗಣಮನ ಅಭಿಯಾನ ಹಿನ್ನೆಲೆಯಲ್ಲಿ ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕಡವಾಡಕ್ಕೆ ಆಗಮಿಸಿದ್ದ ಚಕ್ರವರ್ತಿ ಸೂಲಿಬೆಲೆ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಕಾರವಾರ ಗ್ರಾಮೀಣ ಠಾಣೆ ಪೊಲಿಸರು ಸೂಲಿಬೆಲೆ ವಿರುದ್ಧ ಸುಮೊಟೋ ಕೇಸ್ ದಾಖಲಿಸಿಕೊಂಡಿದ್ದಾರೆ.
ಕಡವಾಡದ ಬೋವಿವಾಡದಲ್ಲಿರುವ ಶ್ರೀ ಆದಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಚಕ್ರವರ್ತಿ ಸೂಲಿಬೆಲೆ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂಗಳು ಬದುಕುವುದು ಕಷ್ಟ. ಮುಸ್ಲಿಂರಿಗೆ ಸಿಎಂ ಸಿದರಾಮಯ್ಯ ಅವರ ಅಭಯ ಹಸ್ತವಿದೆ ಎಂದು ವಾಗ್ದಾಳಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಹಿಂದೂ-ಮುಸ್ಲಿಂ ಧರ್ಮಗಳ ನಡುವೆ ವೈಮನಸ್ಸು ಉಂಟು ಮಾಡುವ ಹೇಳಿಕೆ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.