ರಾಯಚೂರು: ಮುಂಗಾರು ಮತ್ತು ಹಿಂಗಾರಿಗೆ ಪ್ರತ್ಯೇಕ ಪರಿಹಾರ ನೀಡುವ ಕುರಿತಂತೆ ನವೆಂಬರ್ 9ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುವುದಾಗಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
ರಾಯಚೂರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕೇಂದ್ರ ಬರ ಅಧ್ಯಯನ ತಂಡ ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದರೂ ಕೇಂದ್ರ ಸರ್ಕಾರದಿಂದ ಬರ ಪರಿಹಾರ ಅನುದಾನ ಬಿಡುಗಡೆ ಮಾಡಿಲ್ಲ. ಕೇಂದ್ರ ಅನುದಾನ ಬಿಡುಗಡೆ ಮಾಡಿದಲ್ಲಿ ರಾಜ್ಯ ಸರ್ಕಾರದಿಂದಲೂ ಸೇರಿಸಿ ಪರಿಹಾರ ವಿತರಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.
ರಾಷ್ಟ್ರೀಯ ಫಸಲ್ ಭೀಮಾ ಯೋಜನೆಯಡಿ ಬೇರೆಯವರ ಖಾತೆಗೆ ಹಣ ಜಮಾ ಆಗಿದ್ದು, ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಮುಂದಿನ ವರ್ಷದಿಂದ ರಾಷ್ಟ್ರೀಯ ಫಸಲ್ ಭೀಮಾ ಯೋಜನೆಯಲ್ಲಿ ಬದಲಾವಣೆ ತರಲಿದ್ದು, ಒಂದು ವರ್ಷಕ್ಕೆ ಸೀಮಿತವಾಗಿ ಯೋಜನೆ ರೂಪಿಸಲಾಗುವುದು. ಪರಿಣಾಮಕಾರಿಯಾಗಿ ಯೋಜನೆ ಜಾರಿಗೊಳಿಸಲಿದ್ದು, ರೈತರಿಗೆ ಯಾವುದೇ ತೊಂದರೆಯಾಗಲು ಸರ್ಕಾರ ಬಿಡುವುದಿಲ್ಲ ಎಂದು ಹೇಳಿದ್ದಾರೆ.