ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ನಡೆಯಲಿದ್ದು, ತಮ್ಮ ಪಕ್ಷಗಳ ಅಭ್ಯರ್ಥಿಗಳ ಗೆಲುವಿಗಾಗಿ ನಾಯಕರುಗಳು ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಇದರ ಮಧ್ಯೆ ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ರಾಜಕೀಯದಿಂದ ನಿವೃತ್ತಿ ಘೋಷಿಸಿರುವ ಅವರು ಈ ಬಾರಿ ಚುನಾವಣಾ ಕಣಕ್ಕೆ ಇಳಿದಿಲ್ಲ. ಇಂದು ಮೈಸೂರಿನ ಜಯಲಕ್ಷ್ಮಿಪುರಂನಲ್ಲಿರುವ ತಮ್ಮ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ ವೇಳೆ ಅವರೊಂದಿಗೆ ಮಾತುಕತೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಶ್ರೀನಿವಾಸ್ ಪ್ರಸಾದ್, ಚಾಮರಾಜನಗರದಲ್ಲಿ ‘ಕೈ’ ಗೆ ಉತ್ತಮ ವಾತಾವರಣವಿದೆ ಎಂದು ಹೇಳುವ ಮೂಲಕ ಕುತೂಹಲ ಕೆರಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಪಕ್ಷಕ್ಕೆ ಬೆಂಬಲ ನೀಡುವಂತೆ ನನಗೆ ಕೋರಿದರು. ಆದರೆ ನಾನು ರಾಜಕೀಯದಿಂದ ನಿವೃತ್ತಿಯಾಗಿರುವುದಾಗಿ ತಿಳಿಸಿದ್ದೇನೆ ಎಂದು ಹೇಳಿದ ಶ್ರೀನಿವಾಸ್ ಪ್ರಸಾದ್, ಬಹಳ ವರ್ಷಗಳ ನಂತರ ಸಿದ್ದರಾಮಯ್ಯನವರೊಂದಿಗಿನ ಇಂದಿನ ಭೇಟಿ ನನಗೆ ಖುಷಿ ತಂದಿದೆ ಎಂದರು.
ಇನ್ನು ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ನಾಳೆ ಮೈಸೂರಿಗೆ ಆಗಮಿಸಲಿದ್ದು, ಈ ಕುರಿತಂತೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶ್ರೀನಿವಾಸ್ ಪ್ರಸಾದ್, ನನಗೆ ಯಾರೂ ಕರೆದಿಲ್ಲ, ನಾನೂ ಹೋಗುವುದಿಲ್ಲ ಎಂದು ಮಾರ್ಮಿಕವಾಗಿ ಉತ್ತರಿಸಿದರು.