ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಪ್ರತಾಪರೆಡ್ಡಿ ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಪ್ರತಿಕ್ರಿಯೆ ನೀಡಿದ ಚಾಮರಾಜಪೇಟೆ ನಾಗರೀಕ ವೇದಿಕೆ ಅಧ್ಯಕ್ಷ ರಾಮೇಗೌಡ, ಮೈದಾನದ ವಿಚಾರವಾಗಿ ಮೂರು ತಿಂಗಳಿನಿಂದ ಹೋರಾಟ ಮಾಡುತ್ತಿದ್ದೇವೆ. ಗಣೇಶೋತ್ಸವಕ್ಕೆ ಸರ್ಕಾರ ಅವಕಾಶ ನೀಡಿತ್ತು ಎಂದು ಹೇಳಿದ್ದಾರೆ.
ವಕ್ಫ್ ಬೋರ್ಡ್ ನವರು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಿದ್ದರು. ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಒಂದು ಧರ್ಮದ ಜಾಗದಲ್ಲಿ ಮತ್ತೊಬ್ಬರು ಹೋಗಬಾರದು ಎಂದು ಹೇಳಿದೆ. ಸುಪ್ರೀಂ ಕೋರ್ಟ್ ಆದೇಶಕ್ಕೆ ನಾವು ತಲೆಬಾಗುತ್ತೇವೆ ಎಂದು ಹೇಳಿದ್ದಾರೆ.
ನಮಗೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಮಾಡುವ ಆಸೆ ಇತ್ತು. ಚಾಮರಾಜಪೇಟೆ ನಾಗರೀಕ ವೇದಿಕೆ ಬೇರೆ ಕಡೆ ಗಣೇಶ ಪ್ರತಿಷ್ಠಾಪನೆ ಮಾಡುವುದಿಲ್ಲ. ನಾಗರಿಕ ವೇದಿಕೆಯಿಂದ ಕಾನೂನು ಹೋರಾಟ ಮುಂದುವರೆಸುತ್ತೇವೆ. ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುತ್ತೇವೆ. ಸರ್ಕಾರದ ಜೊತೆ ಸಭೆ ನಡೆಸಿದ ನಂತರ ಮುಂದಿನ ನಿರ್ಧಾರವನ್ನು ತಿಳಿಸುತ್ತೇವೆ ಎಂದು ಹೇಳಿದ್ದಾರೆ.