
ಪಾಟ್ನಾ: ಬಿಹಾರದ ಸುಪೌಲ್ ಜಿಲ್ಲೆಯಲ್ಲಿ ಸೋಮವಾರ ಗೋಸುಂಬೆ(ಊಸರವಳ್ಳಿ)ಯಿದ್ದ ಮಧ್ಯಾಹ್ನದ ಊಟವನ್ನು ಸೇವಿಸಿದ ಸುಮಾರು 45 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.
ಜಿಲ್ಲೆಯ ಭೀಮಪುರ ಪೊಲೀಸ್ ಠಾಣಾ ವ್ಯಾಪ್ತಿಯ ತುಡಿ ಗ್ರಾಮದ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳು ವಾಂತಿ, ಹೊಟ್ಟೆನೋವಿನಿಂದ ಬಳಲುತ್ತಿದ್ದಾರೆ.
ಸೋಮವಾರ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ನೀಡಲಾಗಿದ್ದು, ಆಹಾರ ಸೇವಿಸಿದ ಬಳಿಕ ಹಲವು ವಿದ್ಯಾರ್ಥಿಗಳಿಗೆ ವಾಂತಿ, ಹೊಟ್ಟೆನೋವು ಕಾಣಿಸಿಕೊಂಡಿದೆ. ಶಿಕ್ಷಕರು ಮತ್ತು ಗ್ರಾಮಸ್ಥರು ಕೂಡಲೇ 45 ಮಕ್ಕಳನ್ನು ರಕ್ಷಿಸಿ ಚಿಕಿತ್ಸೆಗಾಗಿ ನರಪತಗಂಜ್ ಸಾಮಾನ್ಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಇವರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ.
ಘಟನೆಯ ನಂತರ, ಭೀಮ್‌ಪುರ ಪೊಲೀಸ್ ಠಾಣೆಯ ಅಧಿಕಾರಿಗಳು ಶಾಲೆಗೆ ತಲುಪಿದರು ಮತ್ತು ವಿದ್ಯಾರ್ಥಿಗಳಿಗೆ ಬಡಿಸುವ ಆಹಾರವನ್ನು ಪರಿಶೀಲಿಸಿದ್ದು, ಅದರಲ್ಲಿ ಗೋಸುಂಬೆ ಕಂಡುಬಂದಿದೆ.
ಇದಕ್ಕೂ ಮುನ್ನ ಅರಾರಿಯಾ ಜಿಲ್ಲೆಯ ಶಾಲೆಯೊಂದರಲ್ಲಿ ಮಧ್ಯಾಹ್ನದ ಊಟದಲ್ಲಿ ಹಾವೊಂದು ಪತ್ತೆಯಾಗಿತ್ತು. ಸಿವಾನ್ ನಲ್ಲಿ ವಿದ್ಯಾರ್ಥಿಗಳಿಗೆ ಕೊಳೆತ ಮೊಟ್ಟೆಗಳನ್ನು ನೀಡಲಾಗಿತ್ತು.