ಹೈದರಾಬಾದ್: ತಿರುಪತಿ ತಿಮ್ಮಪನ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ.
ಹಿಂದಿನ ವೈಎಸ್ ಆರ್ ಕಾಂಗ್ರೆಸ್ ನೇತೃತ್ವದ ಸರ್ಕಾರದ ಅವಧಿಯಲ್ಲಿ ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದಿಂದ ನೀಡಲಾಗುವ ಪ್ರಸಾದ ತಿರುಪತಿ ತಿಮ್ಮಪ್ಪನ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗುತ್ತಿತ್ತು. ಕಳೆದ 5 ವರ್ಷಗಳಲ್ಲಿ ವೈಎಸ್ ಆರ್ ಕಾಂಗ್ರೆಸ್ ತಿರುಮಲದ ಪಾವಿತ್ರ್ಯತೆಯನ್ನೇ ಹಾಳು ಮಾಡಿದೆ ಎಂದು ಆರೋಪಿಸಿದ್ದಾರೆ.
ತಿರುಪತಿ ಲಡ್ಡುವಿನಲ್ಲಿ ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಕೆ ಮಾಡಿದ್ದರು. ದೇವಸ್ಥಾನದ ಪಾವಿತ್ರ್ಯತೆ ಕಾಪಾಡಲು ಪ್ರಯತ್ನಿಸುತ್ತಿದ್ದೇವೆ. ದೇವಸ್ಥಾನದ ಸಂಪ್ರದಾಯಗಳನ್ನು ಮರುಸ್ಥಾಪಿಸುವುದರ ಜೊತೆಗೆ ದೇವಾಲಯಗಳನ್ನು ಉಳಿಸಿಕೊಳ್ಳಲು ಸರ್ಕಾರ ಯತ್ನಿಸುತ್ತಿದೆ ಎಂದಿದ್ದಾರೆ.
ವೈಎಸ್ ಆರ್ ಕಾಂಗ್ರೆಸ್ ಚಂದ್ರಬಾಬು ನಾಯ್ಡು ಅವರ ಆರೋಪಗಳನ್ನು ನಿರಾಕರಿಸಿದೆ. ಇದು ಆಧಾರರಹಿತ ಹಾಗೂ ದುರುದ್ದೇಶ ಪೂರಕವಾದ ಆರೋಪಗಳು ಎಂದಿದೆ. ಚಂದ್ರಬಾಬು ನಾಯ್ಡು ರಾಜಕೀಯ ಲಾಭಕ್ಕಾಗಿ ಧಾರ್ಮಿಕ ಭಾವನೆಗಳನ್ನು ಬಳಸಿಕೊಳ್ಳುತ್ತಾ ಯಾವ ಮಟ್ಟಕ್ಕೆ ಇಳಿಯುತ್ತಿದ್ದಾರೆ ಎಂದು ಕಿಡಿಕಾರಿದೆ.