ಬೆಂಗಳೂರು: ಆಮ್ ಆದ್ಮಿ ಪಕ್ಷದಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದ್ದು, ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ಅವರನ್ನು ನೇಮಕ ಮಾಡಲಾಗಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ನಿರೀಕ್ಷಿತ ಯಶಸ್ಸು ಕಂಡಿಲ್ಲ. ಮುಂಬರುವ ಲೋಕಸಭೆ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷವನ್ನು ಸಜ್ಜುಗೊಳಿಸಲು ರಾಜ್ಯ ಸಂಘಟನೆಯಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದೆ.
ಮುಖ್ಯಮಂತ್ರಿ ಚಂದ್ರು ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ರಾಜ್ಯಾಧ್ಯಕ್ಷರಾಗಿದ್ದ ಪೃಥ್ವಿ ರೆಡ್ಡಿ ಅವರಿಗೆ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿದೆ. ರಾಜ್ಯದ ದಕ್ಷಿಣ ವಿಭಾಗದ ಸಂಘಟನಾ ಕಾರ್ಯದರ್ಶಿಯಾಗಿ ಡಾ.ಬಿ.ಟಿ. ನಾಗಣ್ಣ, ಉತ್ತರ ವಿಭಾಗದ ಸಂಘಟನಾ ಕಾರ್ಯದರ್ಶಿಯಾಗಿ ಅರ್ಜುನ್ ಪರಪ್ಪ ಹಲಗಿಗೌಡರ ಅವರನ್ನು ನೇಮಕ ಮಾಡಲಾಗಿದೆ. ಇದುವರೆಗೆ ಪಕ್ಷದ ಪ್ರಚಾರ ಮತ್ತು ಜನಸಂಪರ್ಕ ವಿಭಾಗದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ಕಾರ್ಯನಿರ್ವಹಿಸುತ್ತಿದ್ದು, ಅವರಿಗೆ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಲಾಗಿದೆ.