ಬೆಂಗಳೂರು: ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ ತರುವ ನಿಟ್ಟಿನಲ್ಲಿ ಯುಜಿಸಿ ಪ್ರಕಟಿಸಿದ ಹೊಸ ಕರಡು ನಿಯಮಾವಳಿಗಳ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲು ಫೆಬ್ರವರಿ 5ರಂದು ಬೆಂಗಳೂರಿನಲ್ಲಿ ದೇಶದ ಎಲ್ಲಾ ರಾಜ್ಯಗಳ ಉನ್ನತ ಶಿಕ್ಷಣ ಸಚಿವರ ರಾಷ್ಟ್ರಮಟ್ಟದ ಸಮಾವೇಶ ಆಯೋಜಿಸಲಾಗಿದೆ ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ಯುಜಿಸಿಯ ಹೊಸ ಕರಡು ನಿಯಮಾವಳಿಗಳು ಉನ್ನತ ಶಿಕ್ಷಣದಲ್ಲಿ ಪ್ರಸ್ತುತ ರಾಜ್ಯ ಸರ್ಕಾರಗಳಿಗೆ ಇರುವ ಅಧಿಕಾರವನ್ನು ಮೊಟಕುಗೊಳಿಸುತ್ತದೆ ಎನ್ನುವ ಅಭಿಪ್ರಾಯ ಕರ್ನಾಟಕ, ಕೇರಳ, ತಮಿಳುನಾಡು ಸರ್ಕಾರ ಸೇರಿದಂತೆ ಕೆಲವು ಎನ್.ಡಿ.ಎ. ಪಾಲುದಾರ ಪಕ್ಷಗಳು ರಾಜ್ಯಗಳಿಂದ ವ್ಯಕ್ತವಾದ ಹಿನ್ನೆಲೆಯಲ್ಲಿ ಹೊಸ ಕರಡು ನಿಯಮಗಳು, ವಿವಿಗಳ ಕುಲಪತಿ, ಬೋಧಕರು, ಬೋಧಕೇತರ ನೇಮಕಾತಿ ಸೇರಿ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ರಾಜ್ಯ ಸರ್ಕಾರಗಳ ಅಧಿಕಾರದ ಮೇಲೆ ಬೀರುವ ಪರಿಣಾಮಗಳ ಕುರಿತಂತೆ ಚರ್ಚಿಸಲು ಸಮಾವೇಶ ಕರೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.