ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಎನ್ ಡಿಎ ಅಭ್ಯರ್ಥಿ ಆಯ್ಕೆ ವಿಚಾರವಾಗಿ ತೀವ್ರ ಕುತೂಹಲ ಮೂಡಿದೆ. ಒಂದೆಡೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಸಜ್ಜಾಗಿದ್ದರೆ ಮತ್ತೊಂದೆಡೆ ಸಿ.ಪಿ.ಯೋಗೇಶ್ವರ್ ಕೂಡ ಕಣಕ್ಕಿಳಿಯಲು ಮುಂದಾಗಿದ್ದಾರೆ. ಸಂಜೆ ವೇಳೆಗೆ ಅಭ್ಯರ್ಥಿ ಬಗ್ಗೆ ನಿಚ್ಚಳ ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಪಿ.ಯೋಗೇಶ್ವರ್, ಚನ್ನಪಟ್ಟಣದಲ್ಲಿ ನಾನು ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕು ಎಂಬ ಆಸೆಯಿದೆ. ಅವಕಾಶ ಕೊಟ್ಟರೆ ಎನ್ ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ. ಆದರೆ ಬಿಜೆಪಿ ನಾಯಕರು ನನಗೆ ಬೆಂಬಲ ನೀಡುತ್ತಿಲ್ಲ. ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತು ಕೇಳಿಬಂದಿದೆ ಎಂದಿದ್ದಾರೆ.
ನಿಖಿಲ್ ಅವರನ್ನು ನಿಲ್ಲಿಸಬೇಕು ಎಂದು ಕುಮಾರಸ್ವಾಮಿ ಬಹಳ ಯತ್ನ ನಡೆಸುತ್ತಿದ್ದಾರೆ, ಅವರ ಮನಸ್ಸಿನಲ್ಲಿ ಹಾಗಿದ್ದಮೇಲೆ ನಾನೇನು ಮಾಡಲು ಸಾಧ್ಯ? ಒಂದು ವೇಳೆ ಟಿಕೆಟ್ ಸಿಗದಿದ್ದರೆ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ. ಸದ್ಯ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ ಆ ಬಳಿಕ ನನ್ನ ನಿಲುವಿನ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದು ಹೇಳಿದರು.