ರಾಮನಗರ: ಚನ್ನಪಟ್ಟಣ ಉಪ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವರ ಹೆಚ್.ಡಿ.ಕುಮಾರಸ್ವಾಮಿ ಬಿಡದಿ ಸಮೀಪದ ಕೇತಿಗಾನಹಳ್ಳಿಯ ತಮ್ಮ ತೋಟದಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರ ಸಭೆ ನಡೆಸಿದರು.
ಸಭೆ ಬಳಿಕ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಈಗಾಗಲೇ 5 ಜಿಲ್ಲಾ ಪಂಚಾಯತಿ, ಕ್ಷೇತ್ರ ಹಾಗೂ ಪಟ್ಟಣ ಭಾಗದಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದೇವೆ. ಈ ಸಭೆಯಲ್ಲಿ ಹಳ್ಳಿ, ಹೋಬಳಿ, ಪಂಚಾಯಿತಿ ಮಟ್ಟದ ಮುಖಂಡರು ಬಂದಿದ್ದರು. ಚುನಾವಣೆಗೆ ಯಾವ ರೀತಿ ತಯಾರಿ ಮಾಡಿಕೊಳ್ಳಬೇಕು. ಅಭ್ಯರ್ಥಿ ಯಾರಾಗಬೇಕು ಎನ್ನುವುವ ಬಗ್ಗೆ ಸಮಾಲೋಚನೆ ನಡೆಸಿದ್ದೇನೆ. ಜೆಡಿಎಸ್- ಬಿಜೆಪಿ ಎರಡು ಪಕ್ಷಗಳು ಹೊಂದಾಣಿಕೆಯಿಂದ ಕೆಲಸ ಮಾಡಬೇಕು ಎಂದರು.
ನವೆಂಬರ್ ಒಳಗೆ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಬೇಕಿದೆ. ಅದೇ ಸಮಯದಲ್ಲಿ ಚನ್ನಪಟ್ಟಣ ಉಪ ಚುನಾವಣೆ ನಡೆಯಬಹುದು. ಇನ್ನು ಒಂದು ವಾರದಲ್ಲಿ ಚುನಾವಣೆ ಘೋಷಣೆಯಾಗಬಹುದು. ಅಂತಿಮವಾಗಿ ದೆಹಲಿ ಮಟ್ಟದಲ್ಲಿ ಬಿಜೆಪಿಯ ಹೈಕಮಾಂಡ್ ಹಾಗೂ ನಾವು ಕೂತು ಚರ್ಚೆ ಮಾಡುತ್ತೇವೆ ಎಂದರು.
ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಕಳೆದ ಎರಡು ಬಾರಿ ಜೆಡಿಎಸ್ ನಿಂದ ಗೆದ್ದಿದ್ದೇವೆ. ಈ ಹಿಂದಿನಿಂದಲೂ ಇದು ಜೆಡಿಎಸ್ ಭದ್ರಕೋಟೆ. ನಿಖಿಲ್ ಕುಮಾರಸ್ವಾಮಿ ಉಪ ಚುನಾವಣೆಯ ಅಭ್ಯರ್ಥಿ ಆಗಬೇಕು ಎಂಬ ಬಗ್ಗೆ ಕಾರ್ಯಕರ್ತರಿಂದ ಒತ್ತಡ ಇದೆ. 95% ನಾಯಕರು, ಮುಖಂಡರ ಅಭಿಪ್ರಾಯ ಕೂಡ ಇದೆ. ಆದರೆ, ನಾವು ಈಗ ಇರುವ ಸನ್ನಿವೇಶ ನೋಡಿಕೊಂಡು ನಿರ್ಧಾರ ಮಾಡಬೇಕು. ನಾವೀಗ ಎನ್ ಡಿಎ ಭಾಗ. ಎನ್ ಡಿಎ ಅಭ್ಯರ್ಥಿ ಗೆಲ್ಲಬೇಕು. ಹಾಗಾಗಿ ಬೆಜೆಪಿ ನಾಯಕರ ಜೊತೆ ಚರ್ಚೆಸಿ, ಎಲ್ಲರ ಅಭಿಪ್ರಾಯ ಪಡೆದು ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದು ಹೇಳಿದರು.
ಇನ್ನೊಂದು ವಾರದಲ್ಲಿ ಟಿಕೆಟ್ ಫೈನಲ್ ಆಗುತ್ತದೆ. ಚುನಾವಣೆ ದಿನಾಂಕ 4-5 ದಿನಗಳಲ್ಲಿ ಯಾವಾಗ ಬೇಕಾದರೂ ಘೋಷಣೆ ಆಗಬಹುದು ಎಂದು ತಿಳಿಸಿದರು.