ಬೆಂಗಳೂರು: ರಾಜ್ಯದ ಗಮನ ಸೆಳೆದಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಸ್ಪರ್ಧಿಸುವ ಸಾಧ್ಯತೆ ಇದೆ.
ಈ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅನೇಕ ಬಾರಿ ಚನ್ನಪಟ್ಟಣಕ್ಕೆ ಭೇಟಿ ನೀಡಿ ಕಾಂಗ್ರೆಸ್ ಗೆಲುವಿಗೆ ಪೂರ್ವ ತಯಾರಿ ಮಾಡಿಕೊಂಡಿದ್ದಾರೆ. ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕೂಡ ಸ್ಪರ್ಧೆಗೆ ಸಿದ್ಧತೆ ಮಾಡಿಕೊಂಡಿದ್ದು, ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಒಂದು ವೇಳೆ ಬಿಜೆಪಿ ಟಿಕೆಟ್ ಸಿಗದಿದ್ದರೆ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ಅವರು ಚಿಂತನೆ ನಡೆಸಿದ್ದಾರೆ.
ಆದರೆ, ದಳಪತಿಗಳ ಲೆಕ್ಕಾಚಾರವೇ ಬೇರೆ ಇದೆ. ತಾವು ಗೆದ್ದಿದ್ದ ಈ ಕ್ಷೇತ್ರವನ್ನು ಉಳಿಸಿಕೊಳ್ಳಬೇಕೆಂಬ ಉದ್ದೇಶದಿಂದ ಹೆಚ್.ಡಿ. ಕುಮಾರಸ್ವಾಮಿ ಅಳೆದು ತೂಗಿ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿದ್ದಾರೆ. ಚನ್ನಪಟ್ಟಣ ಉಪ ಚುನಾವಣೆ ಟಿಕೆಟ್ ಗೆ ಭಾರಿ ಪೈಪೋಟಿ ಇದೆ. ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಬಗ್ಗೆಯೂ ಚರ್ಚೆ ನಡೆದಿದೆ. ಆದರೆ, ಮೈತ್ರಿ ಅಭ್ಯರ್ಥಿಯಾಗಿ ಪ್ರತಾಪ್ ಸಿಂಹ ಅವರನ್ನು ಕಣಕ್ಕಿಳಿಸಲು ಜೆಡಿಎಸ್ ನಾಯಕರು ಕುಮಾರಸ್ವಾಮಿಯವರ ಮನವೊಲಿಸಿದ್ದಾರೆ. ಮಾಜಿ ಸಚಿವರಾದ ಸಾ.ರಾ. ಮಹೇಶ್ ಮತ್ತು ಬಂಡೆಪ್ಪ ಕಾಶೆಂಪೂರ ಸೇರಿದಂತೆ ಹಲವು ನಾಯಕರು ಪ್ರತಾಪ್ ಸಿಂಹ ಅವರನ್ನು ಜೆಡಿಎಸ್ ನಿಂದ ಕಣಕ್ಕಿಳಿಸಲು ಸಲಹೆ ನೀಡಿದ್ದು, ಇದಕ್ಕೆ ಕುಮಾರಸ್ವಾಮಿ ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಬಿಜೆಪಿ ನಾಯಕರೊಂದಿಗೆ ಚರ್ಚಿಸಿದ ಬಳಿಕ ಪ್ರತಾಪ್ ಸಿಂಹ ಒಪ್ಪಿಗೆ ಸೂಚಿಸಲಿದ್ದಾರೆ ಎಂದು ಹೇಳಲಾಗಿದೆ.