ಬೆಂಗಳೂರು: ಚನ್ನಪಟ್ಟಣದ ಹಾಲಿ ಶಾಸಕರಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.
ಚನ್ನಪಟ್ಟಣ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಲಿದ್ದು, ಬಿಜೆಪಿ ಮತ್ತು ಜೆಡಿಎಸ್ ಈ ಕ್ಷೇತ್ರಕ್ಕಾಗಿ ತೀವ್ರ ಪೈಪೋಟಿ ನಡೆಸುವ ಸಾಧ್ಯತೆ ಇದೆ. ಕುಮಾರಸ್ವಾಮಿ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಅವರ ರಾಜೀನಾಮೆಯಿಂದ ತೆರವಾಗಲಿರುವ ಸ್ಥಾನಕ್ಕೆ ಆರು ತಿಂಗಳ ಒಳಗೆ ವಿಧಾನಸಭೆ ಉಪಚುನಾವಣೆ ನಡೆಯಲಿದೆ.
ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಕಣಕ್ಕಿಳಿಯಬೇಕೆಂಬುದು ಜೆಡಿಎಸ್ ಮುಖಂಡರ ಒತ್ತಾಸೆಯಾಗಿದೆ. ಆದರೆ ಈ ಬಗ್ಗೆ ಇದುವರೆಗೆ ನಿಖಿಲ್ ಕುಮಾರಸ್ವಾಮಿ ಮತ್ತು ಹೆಚ್.ಡಿ. ಕುಮಾರಸ್ವಾಮಿ ಯಾವುದೇ ಪ್ರಸ್ತಾಪ ಮಾಡಿಲ್ಲ. ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಸಿ.ಪಿ. ಯೋಗೇಶ್ವರ್ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿದ್ದಾರೆ ಎಂದು ಹೇಳಲಾಗಿದೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮತ್ತು ಡಾ.ಸಿ.ಎನ್. ಮಂಜುನಾಥ್ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿಸುವಲ್ಲಿ, ಪ್ರಚಾರ ಚುನಾವಣೆ ಕಾರ್ಯತಂತ್ರ, ಗೆಲುವಿನಲ್ಲಿ ಸಿ.ಪಿ. ಯೋಗೇಶ್ವರ್ ಹೆಚ್ಚಿನ ಶ್ರಮ ಹಾಕಿದ್ದಾರೆ. ಅವರು ಕೂಡ ಚನ್ನಪಟ್ಟಣ ಉಪಚುನಾವಣೆಯಲ್ಲಿ ಆಕಾಂಕ್ಷಿಯಾಗಿದ್ದಾರೆನ್ನಲಾಗಿದೆ.
ಆದರೆ, ಉಪ ಚುನಾವಣೆ ಬಗ್ಗೆ ಇನ್ನು ಬಿಜೆಪಿ ಮತ್ತು ಜೆಡಿಎಸ್ ವಲಯದಲ್ಲಿ ಯಾವುದೇ ಚರ್ಚೆ ಆರಂಭವಾಗಿಲ್ಲ. ತೆರೆ ಮರೆಯಲ್ಲಿ ಪ್ರಾಥಮಿಕ ಹಂತದಿಂದ ಚರ್ಚೆಗಳು ನಡೆದಿವೆ ಎಂದು ಹೇಳಲಾಗಿದೆ. ಇನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸೋಲು ಕಂಡ ಡಿ.ಕೆ. ಸುರೇಶ್ ಅವರು ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ. ಕಾಂಗ್ರೆಸ್ ನಾಯಕರಿಗೆ ಡಿ.ಕೆ. ಸುರೇಶ್ ಸೋಲು ಅನಿರೀಕ್ಷಿತ ಆಘಾತ ತಂದಿದ್ದು, ಚನ್ನಪಟ್ಟಣ ಉಪಚುನಾವಣೆಯಲ್ಲಿ ಡಿ.ಕೆ. ಸುರೇಶ್ ಅವರನ್ನು ಕಣಕ್ಕಿಳಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ. ಹೀಗಾದಲ್ಲಿ ಚನ್ನಪಟ್ಟಣ ಉಪಚುನಾವಣೆ ಕಣ ರಂಗೇರಲಿದೆ.