ಬೆಂಗಳೂರು: ಯಲಹಂಕ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರದ ಸ್ಥಾಪನೆಗೆ ಶ್ರಮಿಸಿದ ಉದ್ಯೋಗಿಗಳಿಗೆ 5 ಸಾವಿರ ರೂ. ಬೋನಸ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.
ಕಳೆದ ವರ್ಷ ರಾಜ್ಯದಲ್ಲಿ ತೀವ್ರ ಬರಗಾಲವಿದ್ದರೂ ಸಮರ್ಪಕ ವಿದ್ಯುತ್ ಪೂರೈಸುವಲ್ಲಿ ಯಶಸ್ವಿಯಾಗಿದ್ದೇವೆ. ಆದರೂ ಭವಿಷ್ಯದ ಬೇಡಿಕೆಯನ್ನು ಮುಂದಿಟ್ಟುಕೊಂಡು 2030ರ ವೇಳೆಗೆ ಈಗಿರುವ 34,639 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಸ್ಥಾಪಿತ ಸಾಮರ್ಥ್ಯವನ್ನು 60 ಸಾವಿರ ಮೆಗಾವ್ಯಾಟ್‌ಗೆ ಹೆಚ್ಚಿಸಲು ಬಜೆಟ್‌ನಲ್ಲಿ ಘೋಷಿಸಿದ್ದು, ಅದಕ್ಕೆ ತಕ್ಕಂತೆ ಯೋಜನೆ ರೂಪಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ವಿದ್ಯುತ್ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧ್ಯವಾಗದಿದ್ದರೆ ಆರ್ಥಿಕ ಪ್ರಗತಿ ಸಾಧ್ಯವಿಲ್ಲ. ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸದಿದ್ದಲ್ಲಿ ಜಿಡಿಪಿ ಬೆಳವಣಿಗೆಯೂ ಆಗುವುದಿಲ್ಲ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರವು ಗುಣಮಟ್ಟದ ವಿದ್ಯುತ್ ಪೂರೈಕೆ ಜೊತೆಗೆ ವಿದ್ಯುತ್ ಉತ್ಪಾದನೆ ಹೆಚ್ಚಿಸಲು ಆದ್ಯತೆ ನೀಡುತ್ತದೆ ಎಂದು ಹೇಳಿದ್ದಾರೆ.