ಮೈಸೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾದ ನಂತರ ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸಬೇಕು, ಪುನರ್ ಪರಿಶೀಲಿಸಬೇಕೆಂಬ ಚರ್ಚೆ ಆಡಳಿತ ಪಕ್ಷದ ಶಾಸಕರು, ನಾಯಕರಿಂದಲೇ ಕೇಳಿ ಬಂದಿದೆ.
ಆದರೆ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿಗಳೇ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾವು ವೋಟಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಹಾಗಾಗಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳನ್ನು ಪುನರ್ ಪರಿಶೀಲಿಸುವ ಪ್ರಶ್ನೆ ಇಲ್ಲ. ಬಡವರಿಗಾಗಿ ನಾವು ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ. ಲೋಕಸಭೆ ಚುನಾವಣೆಯಲ್ಲಿ ನಮಗೆ ಹಿನ್ನಡೆ ಆಗಿರಬಹುದು. ಆದರೆ ಮತ ಗಳಿಕೆ ವಿಚಾರದಲ್ಲಿ ಶೇಕಡ 13ರಷ್ಟು ಹೆಚ್ಚಾಗಿದೆ. ಈ ಬಾರಿ 9 ಸ್ಥಾನ ಗೆದ್ದಿದ್ದೇವೆ ಎಂದು ಹೇಳಿದ್ದಾರೆ.